
ಕೋವಿಡ್ – 19 ಮಹಾಮಾರಿಯ ಸಂದಿಗ್ಧತೆಯಿಂದ ಜನಸಾಮಾನ್ಯರು ತಮ್ಮ ತಮ್ಮ ಸ್ವಂತ ಊರುಗಳಿಗೆ ತೆರಳಿರುತ್ತಾರೆ. ಈ ಸಂದರ್ಭಗಳಲ್ಲಿ ಮಕ್ಕಳು ತಮ್ಮ ಹೆತ್ತವರೊಂದಿಗೆ, ಬೇರೆ ಊರಿಗೆ ತೆರಳಿರುವುದರಿಂದ ಅವರ ವಿದ್ಯಾಭ್ಯಾಸ ಅರ್ಧಕ್ಕೆ ನಿಂತಿರುತ್ತದೆ. ಇಂತಹ ವಿದ್ಯಾರ್ಥಿಗಳನ್ನು ಗುರುತಿಸಿ ಅವರ ಶಿಕ್ಷಣವನ್ನು ಮುಂದುವರಿಸಲು ಇಲಾಖೆ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಕೆ. ರಘುಪತಿ ಭಟ್ ಸಲಹೆ ನೀಡಿದರು.
ಉಡುಪಿ ಜಿಲ್ಲಾ ಪಂಚಾಯತ್ ಡಾ. ವಿ. ಎಸ್ ಆಚಾರ್ಯ ಸಭಾಂಗಣದಲ್ಲಿ ಇಂದು ದಿ. 09-06-2020 ರಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾದ ಎಸ್. ಸುರೇಶ್ ಕುಮಾರ್ ರವರ ಅಧ್ಯಕ್ಷತೆಯಲ್ಲಿ ಎಸ್.ಎಸ್.ಎಲ್.ಸಿ ಪರೀಕ್ಷೆ ಪೂರ್ವ ಸಿದ್ಧತೆ ಕುರಿತಂತೆ ಇಲಾಖಾ ಪ್ರಮುಖ ಅಧಿಕಾರಿಗಳೊಂದಿಗೆ ನಡೆದ ಸಭೆಯಲ್ಲಿ ಮಾತನಾಡಿದರು.
2020-21ನೇ ಸಾಲಿನಲ್ಲಿ ವಿದ್ಯಾರ್ಥಿಗಳ ಹಾಜರಾತಿಯನ್ನು ಪರಿಗಣಿಸಿ ವಿದ್ಯಾರ್ಥಿ ಮತ್ತು ಶಿಕ್ಷಕರ ಅನುಪಾತಕ್ಕನುಗುಣವಾಗಿ ಹೆಚ್ಚುವರಿಯೆಂದು ಶಿಕ್ಷಕರನ್ನು ಗುರುತಿಸಿ ಹೆಚ್ಚುವರಿ ಸ್ಥಳಾಂತರ ಪ್ರಕ್ರಿಯೆ ಮಾಡಬಾರದಾಗಿ ತಿಳಿಸಿದ ಅವರು, ಖಾಸಗಿಯಾಗಿ ಎಸ್.ಎಸ್.ಎಲ್.ಸಿ. ಪರೀಕ್ಷೆ ಬರೆಯುವ ಗ್ರಾಮಾಂತರ ಭಾಗದ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೇಂದ್ರವನ್ನು ಕ್ಲಪ್ತ ಸಮಯದಲ್ಲಿ ತಲುಪಲು ಸಾಧ್ಯವಾಗುತ್ತಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಪರೀಕ್ಷಾ ಕೇಂದ್ರಗಳಿಗೆ ತಲುಪಲು ಸೂಕ್ತ ಬಸ್ಸಿನ ಸೌಕರ್ಯವನ್ನು ವ್ಯವಸ್ಥೆ ಗೊಳಿಸುವಂತೆ ತಿಳಿಸಿದರು.
ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವರು ಶಾಸಕರ ಮಾತಿಗೆ ಸಹಮತವನ್ನು ವ್ಯಕ್ತಪಡಿಸುತ್ತಾ ಇಲಾಖಾ ಮಟ್ಟದಲ್ಲಿ ಸೂಕ್ತ ಕ್ರಮ ವಹಿಸುವುದಾಗಿ ತಿಳಿಸಿದರು.
ಶಿಕ್ಷಣ ಸಚಿವರು ಎಸ್.ಎಸ್.ಎಲ್.ಸಿ. ಪರೀಕ್ಷೆಯನ್ನು ಪರೀಕ್ಷಾ ಕೇಂದ್ರಗಳಲ್ಲಿ ಸಾಮಾಜಿಕ ಅಂತರವನ್ನು ಕಾಯ್ದುಕೊಂಡು ವಿದ್ಯಾರ್ಥಿಗಳಿಗೆ ಆಸನದ ವ್ಯವಸ್ಥೆಯನ್ನು ಕಲ್ಪಿಸಲಾಗುವುದು ಹಾಗೂ ವಿದ್ಯಾರ್ಥಿಗಳಿಗೆ ಮಾಸ್ಕ್ ಹಾಗೂ ಸ್ಯಾನಿಟೈಸರ್ ಬಳಸಿ ಪರೀಕ್ಷೆ ಬರೆಯಲು ವ್ಯವಸ್ಥೆ ಮಾಡುವುದಾಗಿ ತಿಳಿಸಿದರು.
ಈ ಸಂದರ್ಭದಲ್ಲಿ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮದಾಯ ದತ್ತಿ ಇಲಾಖಾ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ, ಕಾಪು ಶಾಸಕರಾದ ಲಾಲಾಜಿ ಆರ್ ಮೆಂಡನ್, ಬೈಂದೂರು ಶಾಸಕರಾದ ಸುಕುಮಾರ್ ಶೆಟ್ಟಿ, ಕುಂದಾಪುರ ಶಾಸಕರಾದ ಹಾಲಾಡಿ ಶ್ರೀನಿವಾಸ್ ಶೆಟ್ಟಿ, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷರಾದ ದಿನಕರ್ ಬಾಬು, ಉಪಾಧ್ಯಕ್ಷರಾದ ಶೀಲಾ ಕೆ ಶೆಟ್ಟಿ, ಜಿಲ್ಲಾ ಪಂಚಾಯತ್ ಶಿಕ್ಷಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾದ ಪ್ರತಾಪ್ ಹೆಗ್ಡೆ, ಜಿಲ್ಲಾಧಿಕಾರಿಗಳಾದ ಜಿ ಜಗದೀಶ್, ದಕ್ಷಿಣ ಕನ್ನಡ, ಉತ್ತರ ಕನ್ನಡ,ಉಡುಪಿ ಜಿಲ್ಲೆ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು, ಪೋಲಿಸ್ ವರಿಷ್ಠಾಧಿಕಾರಿಗಳಾದ ಎನ್ ವಿಷ್ಣುವರ್ಧನ್ ಮತ್ತು ಜಿಲ್ಲಾ ಹಾಗೂ ತಾಲೂಕು ಮಟ್ಟದ ಶಿಕ್ಷಣ ಅಧಿಕಾರಿಗಳು ಉಪಸ್ಥಿತರಿದ್ದರು.