ಉಡುಪಿ ಜಿಲ್ಲಾ ಬಿಜೆಪಿಯಿಂದ ಗೌರವ ಸನ್ಮಾನ

ಪ್ರಧಾನಿ ಮೋದಿ ಆಶಯದಂತೆ ಕ್ರೀಡಾ ಕ್ಷೇತ್ರದಲ್ಲಿ ದೇಶದ ಕ್ರೀಡಾಳುಗಳು ಸಾಧನೆಯ ಉತ್ತುಂಗಕ್ಕೇರುವಂತೆ ಶ್ರಮಿಸಬೇಕಾಗಿದೆ. ಈ ನಿಟ್ಟಿನಲ್ಲಿ ರಾಜ್ಯದಲ್ಲಿರುವ 2.50 ಕೋಟಿ ಯುವ ಜನತೆಯ ಸಬಲೀಕರಣದ ಜೊತೆಗೆ ಕ್ರೀಡಾ ಪ್ರತಿಭೆಗಳಿಗೆ ಸದವಕಾಶ ಕಲ್ಪಿಸಿಕೊಡುವ ನಿಟ್ಟಿನಲ್ಲಿ ಕ್ರೀಡಾ ಇಲಾಖೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಲಿದೆ. ಕ್ರೀಡಾ ರಂಗದಲ್ಲಿ ಈಗಾಗಲೇ ವಿಶೇಷ ಸಾಧನೆಗೈಯುತ್ತಿರುವ ಉಡುಪಿ ಜಿಲ್ಲೆಯ ಮೂಲಭೂತ ಆದ್ಯತೆಗಳಿಗೂ ಸಕಾಲಿಕವಾಗಿ ಸ್ಪಂದಿಸಲಾಗುವುದು ಎಂದು ರಾಜ್ಯ ಯೋಜನೆ, ಸಾಂಖ್ಯಿಕ ಹಾಗೂ ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ! ನಾರಾಯಣ ಗೌಡ ಹೇಳಿದರು.
ಅವರು ಉಡುಪಿ ಜಿಲ್ಲಾ ಪ್ರವಾಸದ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಚೇರಿಗೆ ಬೇಟಿ ನೀಡಿ ಪಕ್ಷದ ವತಿಯಿಂದ ನಡೆದ ಗೌರವ ಸನ್ಮಾನವನ್ನು ಸ್ವೀಕರಿಸಿ ಮಾತನಾಡಿದರು.
ಸಭೆಯ ಅಧ್ಯಕ್ಷತೆ ವಹಿಸಿದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಉಡುಪಿ ಜಿಲ್ಲೆ ಅಭಿವೃದ್ಧಿಯಲ್ಲಿ ಮುಂಚೂಣಿಯಲ್ಲಿದ್ದು, ಶಾಸಕ ಕೆ.ರಘುಪತಿ ಭಟ್ ನೇತೃತ್ವದಲ್ಲಿ ಜಿಲ್ಲಾ ಕ್ರೀಡಾಂಗಣವನ್ನು ಮೇಲ್ದರ್ಜೆಗೇರಿಸುವ ಸತ್ಕಾರ್ಯ ನಡೆದಿದೆ. ಇನ್ನಷ್ಟು ಅಭಿವೃದ್ಧಿ ಕೆಲಸ ಕಾರ್ಯಗಳಿಗೆ ಸೂಕ್ತ ನೆರವಿನ ಜೊತೆಗೆ ಜಿಲ್ಲೆಯ ಕ್ರೀಡಾ ಪಟುಗಳ ವಿಕಸನಕ್ಕೆ ಕ್ರೀಡಾ ಇಲಾಖೆಯ ಸ್ಪಂದನೆ ಅತ್ಯಗತ್ಯ ಎಂದರು.
ಈ ಸಂದರ್ಭದಲ್ಲಿ ಶಾಸಕ ಕೆ.ರಘುಪತಿ ಭಟ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಜಿಲ್ಲಾ ಪಂಚಾಯತ್ ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಬಿಜೆಪಿ ಉಡುಪಿ ನಗರ ಅಧ್ಯಕ್ಷ ಮಹೇಶ್ ಠಾಕೂರ್, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಕೆ.ರಾಘವೇಂದ್ರ ಕಿಣಿ, ಉಡುಪಿ ನಗರಸಭಾ ಅಧ್ಯಕ್ಷೆ ಸುಮಿತ್ರಾ ನಾಯಕ್, ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಹಾಗೂ ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠಗಳ ಪದಾಧಿಕಾರಿಗಳು, ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು ಕಾರ್ಯಕ್ರಮ ನಿರೂಪಿಸಿ, ಮನೋಹರ್ ಎಸ್. ಕಲ್ಮಾಡಿ ವಂದಿಸಿದರು.