

ಉಡುಪಿ: ಕೋವಿಡ್ ಸಂಕಷ್ಟದ ಕಾಲಘಟ್ಟದಲ್ಲಿ ಬಿಜೆಪಿಯಿಂದ ದಾಖಲೆ ಮಟ್ಟದಲ್ಲಿ ಆರೋಗ್ಯ ಶಿಬಿರಗಳು ನಡೆಯುತ್ತಿರುವುದು ಗ್ರಾಮೀಣ ಪ್ರದೇಶದ ಜನತೆಗೆ ವರದಾನವಾಗಿ ಪರಿಣಮಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಉಡುಪಿ ನಗರ ವ್ಯಾಪ್ತಿಯ ಅಂಬಲಪಾಡಿ- ಕಡೆಕಾರು ಮಹಾ ಶಕ್ತಿಕೇಂದ್ರದ ಆಶ್ರಯದಲ್ಲಿ ಜಿಲ್ಲಾ ಆರೋಗ್ಯ ಇಲಾಖೆ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ಸಹಭಾಗಿತ್ವದಲ್ಲಿ ಅ.17 ರವಿವಾರ ಅಂಬಲಪಾಡಿ ಬಸ್ ನಿಲ್ದಾಣದ ಬಳಿ ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್ ಅಧ್ಯಕ್ಷತೆಯಲ್ಲಿ ನಡೆದ ಉಚಿತ ಆರೋಗ್ಯ ತಪಾಸಣಾ ಶಿಬಿರ ಮತ್ತು ಉಚಿತ ಕೋವಿಡ್ ಲಸಿಕೆ ವಿತರಣಾ ಶಿಬಿರವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತನಾಡಿದರು.
ಬಿಜೆಪಿ ಕಾರ್ಯಕರ್ತರು ಕೇವಲ ರಾಜಕೀಯ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಿರದೆ ನಿರಂತರ ಜನಸೇವಾ ಕಾರ್ಯಗಳಲ್ಲಿ ತೊಡಗಿಸಿಕೊಂಡಿರುವುದಕ್ಕೆ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳೇ ಸಾಕ್ಷಿ. ಜಿಲ್ಲಾ ಬಿಜೆಪಿ ನೇತೃತ್ವದಲ್ಲಿ ಜಿಲ್ಲೆಯಾದ್ಯಂತ ಎಲ್ಲಾ ಮಂಡಲಗಳ ವ್ಯಾಪ್ತಿಯಲ್ಲಿ ಸೆ.17ರಿಂದ ಅ.7ರವರಿಗೆ 20 ದಿನಗಳ ಪರ್ಯಂತ ಸೇವೆ ಮತ್ತು ಸಮರ್ಪಣ ಅಭಿಯಾನವು ರಾಜ್ಯಕ್ಕೇ ಮಾದರಿಯಾಗಿ ಅತ್ಯಂತ ಯಶಸ್ವಿಯಾಗಿ ನಡೆದಿದೆ. ಈ ಅಭಿಯಾನದ ಅಂಗವಾಗಿ 9 ವಿಧದ ಸೇವಾ ಕಾರ್ಯಗಳ ಸಹಿತ ರಕ್ತದಾನ ಶಿಬಿರ, ಉಚಿತ ಆರೋಗ್ಯ ತಪಾಸಣೆ, ಉಚಿತ ಕಣ್ಣಿನ ತಪಾಸಣೆ, ಉಚಿತ ಕನ್ನಡಕ ವಿತರಣೆ ಹಾಗೂ ಕಣ್ಣಿನ ಉಚಿತ ಶಸ್ತ್ರ ಚಿಕಿತ್ಸೆ ಇತ್ಯಾದಿ ಶಿಬಿರಗಳು ಹಲವಾರು ಕೇಂದ್ರಗಳಲ್ಲಿ ಯಶಸ್ವಿಯಾಗಿ ನಡೆದು ಜನಮನ್ನಣೆ ಗಳಿಸಿದೆ. ಇಂದು ಕೇಂದ್ರ ಮತ್ತು ರಾಜ್ಯ ಸರಕಾರಗಳು ಆರೋಗ್ಯ ಕ್ಷೇತ್ರಕ್ಕೆ ಹೆಚ್ಚಿನ ಮಹತ್ವವನ್ನು ನೀಡುತ್ತಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ಅಲ್ಲಲ್ಲಿ ಸಂಘಟಿತರಾಗಿ ಜನತೆಗೆ ಸಾರ್ಥಕ ಆರೋಗ್ಯ ಸೇವೆಯನ್ನು ಒದಗಿಸುವ ಸತ್ಕಾರ್ಯದಲ್ಲಿ ತೊಡಗಿಸಿಕೊಂಡಿರುವುದು ಪ್ರಶಂಸನೀಯ ಎಂದು ಕುಯಿಲಾಡಿ ಹೇಳಿದರು.
ಉಡುಪಿ ತಾಲೂಕು ವೈದ್ಯಾಧಿಕಾರಿ ಡಾ! ವಾಸುದೇವ ಉಪಾಧ್ಯಾಯ ಮಾತನಾಡಿ, ಆರೋಗ್ಯದ ಕಾಳಜಿ ಹಾಗೂ ನಿಯಮಿತ ಆರೋಗ್ಯ ತಪಾಸಣೆ ಎಲ್ಲರ ಆದ್ಯ ಕರ್ತವ್ಯವಾಗಿದೆ. ಕೊರೋನಾ ಸೋಂಕಿನ ತೀವ್ರತೆ ಕಡಿಮೆಯಾಗುತ್ತಿರುವ ಈ ಸನ್ನಿವೇಶದಲ್ಲಿ ಇಂತಹ ಉಚಿತ ಆರೋಗ್ಯ ತಪಾಸಣಾ ಶಿಬಿರಗಳು ಜನತೆಗೆ ಅನುಕೂಲಕರ ಆರೋಗ್ಯ ಸೇವೆಯನ್ನು ನೀಡುವಲ್ಲಿ ಸಫಲವಾಗಿವೆ. ಸರಕಾರ ಆರೋಗ್ಯ ಇಲಾಖೆಯ ಸಬಲೀಕರಣಕ್ಕೆ ಒತ್ತು ನೀಡಿದೆ. ಕೋವಿಡ್ ಲಸಿಕೆಯ ಯಾವುದೇ ಕೊರತೆ ಇಲ್ಲ. ಉಚಿತ ಕೋವಿಡ್ ಲಸಿಕೆ ವಿತರಣೆಗೆ ಜನಪ್ರತಿನಿಧಿಗಳು ಹಾಗೂ ಸಂಘ-ಸಂಸ್ಥೆಗಳು ಸಹಕರಿಸುತ್ತಿದ್ದು, ಲಸಿಕೆ ಪಡೆಯದೇ ಇರುವ ಸಾರ್ವಜನಿಕರು ಲಭ್ಯವಿರುವ ಲಸಿಕಾ ಕೇಂದ್ರಗಳಲ್ಲಿ ಲಸಿಕೆಯನ್ನು ಪಡೆಯಬಹುದು ಎಂದರು.
ಈ ಸಂದರ್ಭದಲ್ಲಿ ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ರೋಹಿಣಿ ಎಸ್. ಪೂಜಾರಿ ಕಪ್ಪೆಟ್ಟು, ಉಡುಪಿ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ! ಹೇಮಂತ್, ನಗರಸಭಾ ಸದಸ್ಯ ಹರೀಶ್ ಶೆಟ್ಟಿ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ಸೋಮನಾಥ್ ಬಿ.ಕೆ., ಬಿಜೆಪಿ ಅಂಬಲಪಾಡಿ ಕಡೆಕಾರು ಮಹಾ ಶಕ್ತಿಕೇಂದ್ರದ ಸಂಚಾಲಕ ರಾಜೇಂದ್ರ ಪಂದುಬೆಟ್ಟು, ಸಹ ಸಂಚಾಲಕ ಉಮೇಶ್ ಪೂಜಾರಿ ಕುತ್ಪಾಡಿ, ಬಿಜೆಪಿ ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಪ್ರಕೋಷ್ಣಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಬಿಜೆಪಿ ಉಡುಪಿ ನಗರ ಉಪಾಧ್ಯಕ್ಷ ವೆಂಕಟರಮಣ ಕಿದಿಯೂರು, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಮಣಿಪಾಲ್, ನಗರ ಆರೋಗ್ಯ ಸಹಾಯಕಿ ಪ್ರವೀಣ ಕೆ., ಅಂಬಲಪಾಡಿ ನಗರ ಆಶಾ ಕಾರ್ಯಕರ್ತೆ ಸರಸ್ವತಿ ಕೆ. ಶ್ರೀಯಾನ್, ವೈದ್ಯರು ಹಾಗೂ ವೈದ್ಯಕೀಯ ಸಿಬ್ಬಂಧಿಗಳು, ಗ್ರಾಮ ಪಂಚಾಯತ್ ಸದಸ್ಯರು, ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.