
ರಾಜ್ಯ ವಿಧಾನ ಪರಿಷತ್ ಚುನಾವಣೆಯ ಹಿನ್ನೆಲೆಯಲ್ಲಿ ಉಡುಪಿ ಜಿಲ್ಲಾ ಬಿಜೆಪಿ ಆಶ್ರಯದಲ್ಲಿ ಜನಸ್ವರಾಜ್ ಸಮಾವೇಶವು ನ.19 ಶುಕ್ರವಾರ ಬೆಳಿಗ್ಗೆ 10.30ಕ್ಕೆ ಉಡುಪಿ ಪುರಭವನದಲ್ಲಿ ನಡೆಯಲಿದೆ ಎಂದು ಉಡುಪಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ತಿಳಿಸಿದ್ದಾರೆ.
ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಖಾತೆ ಸಚಿವ ಕೆ.ಎಸ್. ಈಶ್ವರಪ್ಪ ನೇತೃತ್ವದಲ್ಲಿ ನಡೆಯಲಿರುವ ಜನಸ್ವರಾಜ್ ಸಮಾವೇಶದಲ್ಲಿ ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಖಾತೆ ಸಚಿವೆ ಶೋಭಾ ಕರಂದ್ಲಾಜೆ, ರಾಜ್ಯ ಹಿಂದುಳಿದ ವರ್ಗಗಳ ಕಲ್ಯಾಣ ಮತ್ತು ಸಮಾಜ ಕಲ್ಯಾಣ ಖಾತೆ ಸಚಿವ ಕೋಟ ಶ್ರೀನಿವಾಸ ಪೂಜಾರಿ, ರಾಜ್ಯ ಇಂಧನ ಮತ್ತು ಕನ್ನಡ ಸಂಸ್ಕೃತಿ ಖಾತೆ ಸಚಿವ ಸುನಿಲ್ ವಿ. ಕುಮಾರ್ ಸಹಿತ ಇನ್ನಿತರ ಸಚಿವ ಗಣ್ಯರು, ಜಿಲ್ಲೆಯ ಎಲ್ಲಾ ಶಾಸಕರು ಮತ್ತು ಪಕ್ಷದ ಮುಖಂಡರು ಪಾಲ್ಗೊಳ್ಳಲಿದ್ದಾರೆ.
ಜನಸ್ವರಾಜ್ಯ ಸಮಾವೇಶದಲ್ಲಿ ವಿಶೇಷವಾಗಿ ಗ್ರಾಮ ಪಂಚಾಯತ್ ಸದಸ್ಯರು, ನಗರಸಭೆ, ಪುರಸಭೆ ಮತ್ತು ಪಟ್ಟಣ ಪಂಚಾಯತ್ ಸದಸ್ಯರ ಸಹಿತ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಮತ್ತು ಮಂಡಲಗಳ ಪದಾಧಿಕಾರಿಗಳು ಭಾಗವಹಿಸಲಿದ್ದಾರೆ.
ಕೇಂದ್ರ ಮತ್ತು ರಾಜ್ಯ ಸರಕಾರದ ಜನಪರ ಪಾರದರ್ಶಕ ಆಡಳಿತ, ಸ್ಥಳೀಯಾಡಳಿತ ಸಂಸ್ಥೆಗಳ ಸಬಲೀಕರಣ, ಹಳ್ಳಿಗಳ ಪುನಶ್ಚೇತನ ಮತ್ತು ಮೂಲ ಸೌಕರ್ಯ ಅಭಿವೃದ್ಧಿಗೆ ವಿಶೇಷ ಒತ್ತು ನೀಡಿರುವ ಕ್ರಮಗಳು ಪಕ್ಷದ ವಿಧಾನ ಪರಿಷತ್ ಅಭ್ಯರ್ಥಿಗಳ ಪ್ರಚಂಡ ಗೆಲುವಿಗೆ ವರದಾನವಾಗಲಿದೆ ಎಂದು ಕುಯಿಲಾಡಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.