
ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದ ಉದ್ಘಾಟನೆ
ಉಡುಪಿ: ಪಕ್ಷದ ವಿಚಾರಧಾರೆಗಳನ್ನು ನೆನಪಿಸಿಕೊಳ್ಳುವ ಜೊತೆಗೆ ಹೊಸ ಆಯಾಮಗಳ ಬಗ್ಗೆ ಪಡೆಯುವ ಶಿಕ್ಷಣವೇ ಬಿಜೆಪಿ ಜಿಲ್ಲಾ ಪ್ರಶಿಕ್ಷಣ ವರ್ಗದ ಪ್ರಮುಖ ಉದ್ದೇಶವಾಗಿದೆ. ಪಕ್ಷದ ವಿಶಿಷ್ಟ ಕಾರ್ಯ ಪದ್ಧತಿ, ಕಾರ್ಯಕರ್ತರ ಶ್ರಮ ಬಿಜೆಪಿಯನ್ನು ಇಂದು ವಿಶ್ವದ ಅತಿ ದೊಡ್ಡ ರಾಜಕೀಯ ಪಕ್ಷವನ್ನಾಗಿಸಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಹೇಳಿದರು.
ಅವರು ಬಿಜೆಪಿ ಜಿಲ್ಲಾ ಪ್ರಶಿಕ್ಷಣ ಪ್ರಕೋಷ್ಠದ ನೇತೃತ್ವದಲ್ಲಿ ಕೋಟೇಶ್ವರದ ಯುವ ಮೆರಿಡಿಯನ್ ಸಭಾಂಗಣದಲ್ಲಿ ಮಾ.11ರಿಂದ 13ರ ವರೆಗೆ 15 ಅವಧಿಯಲ್ಲಿ ನಡೆಯಲಿರುವ ಜಿಲ್ಲಾ ಪ್ರಶಿಕ್ಷಣ ವರ್ಗದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಭಾರತೀಯ ಜನಸಂಘ ಯಾಕಾಗಿ ಹುಟ್ಟಿಕೊಂಡಿತು. ಅಂದಿನಿಂದ ಇಂದಿನವರೆಗೆ, ಇತ್ತೀಚಿಗಿನ ಪಂಚರಾಜ್ಯ ಚುನಾವಣೆಯ ಉತ್ತಮ ಫಲಿತಾಂಶದ ವರೆಗೆ ಬಿಜೆಪಿ ಯಾವ ರೀತಿಯಲ್ಲಿ ಸರ್ವಸ್ಪರ್ಶಿ ಸರ್ವವ್ಯಾಪಿಯಾಗಿ ಬೆಳೆದಿದೆ, ದೇಶದ ರಕ್ಷಣಾ ಸಾಮರ್ಥ್ಯ, ಆಂತರಿಕ ಭದ್ರತೆ ಸಹಿತ ಹತ್ತು ಹಲವು ವಿಚಾರಗಳ ಬಗ್ಗೆ ಅಗತ್ಯ ಮಾಹಿತಿಯನ್ನು ಹಂಚಿಕೊಳ್ಳಲು ಜಿಲ್ಲಾ ಮಟ್ಟದ ಪ್ರಶಿಕ್ಷಣ ವರ್ಗವನ್ನು ಆಯೋಜಿಸಲಾಗಿದೆ.
ಪಂಚರಾಜ್ಯಗಳ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳಲ್ಲಿ ಬಿಜೆಪಿ ಅದ್ಭುತ ಗೆಲುವು ಸಾಧಿಸುವ ಮೂಲಕ ಕಾರ್ಯಕರ್ತರಿಗೆ ಹೆಚ್ಚಿನ ಹುರುಪು ತಂದಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಜನಪರ ಆಡಳಿತ, ಅಭಿವೃದ್ಧಿ ಹಾಗೂ ಹಿಂದುತ್ವದ ಪರ ಜನತೆ ಕೈಜೋಡಿಸಿದ್ದಾರೆ. ಪಂಚರಾಜ್ಯ ಚುನಾವಣೆಯ ಭರ್ಜರಿ ಗೆಲುವು ಕರ್ನಾಟಕ ರಾಜ್ಯದ ಮುಂದಿನ ಚುನಾವಣೆಯಲ್ಲಿಯೂ ಮರುಕಳಿಸಲು ಕಾರ್ಯಕರ್ತರು ಕಾರಣರಾಗಬೇಕು ಎಂದರು.
ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಅರುಣ್ ಕುಮಾರ್ ರವರು ಜಿಲ್ಲಾ ಪ್ರಶಿಕ್ಷಣ ವರ್ಗವನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ, ಏಕಾತ್ಮ ಮಾನವ ದರ್ಶನ ವಿಚಾರದಲ್ಲಿ ಸವಿಸ್ತಾರ ಮಾಹಿತಿ ನೀಡಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ಪ್ರಶಿಕ್ಷಣ ಪ್ರಕೋಷ್ಠದ ರಾಜ್ಯ ಸಮಿತಿ ಸದಸ್ಯೆ ಡಾ! ಮಂಜುಳಾ ರಾವ್, ಪ್ರಶಿಕ್ಷಣ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರಘುವೀರ್ ಶೆಣೈ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗಳಾದ ಕುತ್ಯಾರು ನವೀನ್ ಶೆಟ್ಟಿ, ಸದಾನಂದ ಉಪ್ಪಿನಕುದ್ರು, ಮನೋಹರ್ ಎಸ್. ಕಲ್ಮಾಡಿ, ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ಸಂಚಾಲಕರು, ಸಹ ಸಂಚಾಲಕರು, ಉಡುಪಿ ನಗರಸಭಾ ಸದಸ್ಯರು ಹಾಗೂ ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.