
ಉಡುಪಿ : ಶ್ರೇಷ್ಠ ಮಾನವತಾವಾದಿ ಸಾಮಾಜಿಕ ಪರಿವರ್ತನೆಯ ಹರಿಕಾರ ಸಂವಿಧಾನ ಶಿಲ್ಪಿ ಡಾ! ಬಾಬಾಸಾಹೇಬ್ ಅಂಬೇಡ್ಕರ್ ರವರ ತತ್ವಾದರ್ಶಗಳ ಪಾಲನೆಯಿಂದ ಸ್ವಸ್ಥ ಸಮಾಜ ನಿರ್ಮಾಣ ಸಾಧ್ಯ ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಹೇಳಿದರು.
ಅವರು ಉಡುಪಿ ಜಿಲ್ಲಾ ಬಿಜೆಪಿ ವತಿಯಿಂದ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಅಂಬೇಡ್ಕರ್ ಜಯಂತಿ ಆಚರಣೆ ಕಾರ್ಯಕ್ರಮದಲ್ಲಿ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಗೈದು ಅವರ ಸಾಧನೆ ಮತ್ತು ಜೀವನಾದರ್ಶಗಳನ್ನು ವಿಶ್ಲೇಷಿಸಿ ಮಾತನಾಡಿದರು.
ತಾನೇ ಸ್ವತಃ ಅಸ್ಪೃಶ್ಯತೆ, ಅಸಮಾನತೆಯ ಪಿಡುಗನ್ನು ಅನುಭವಿಸಿ, ಅದರ ವಿರುದ್ಧ ಸೆಟೆದು ನಿಂತು ಜೀವನ ಪರ್ಯಂತ ಹೋರಾಟ ನಡೆಸಿದ ಮಹಾನ್ ಚೇತನ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರು. ಸಮಾಜದ ಕಟ್ಟಕಡೆಯ ವ್ಯಕ್ತಿಗೂ ನ್ಯಾಯ ಒದಗಿಸಬೇಕೆಂಬ ಡಾ! ಬಾಬಾಸಾಹೇಬ್ ಅಂಬೇಡ್ಕರ್ ರವರ ಆಶಯಗಳು ಇಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಜನಪರ ಯೋಜನೆಗಳ ಮೂಲಕ ಸಾಕಾರಗೊಳ್ಳುತ್ತಿವೆ. ಕಾಂಗ್ರೆಸ್ ನಿರಂತರವಾಗಿ ಅಂಬೇಡ್ಕರ್ ರವರ ಹೆಸರನ್ನು ಕೇವಲ ರಾಜಕೀಯ ಲಾಭಕ್ಕಾಗಿ ಉಪಯೋಗಿಸುತ್ತಾ ಬಂದಿದೆ. ಭಾರತೀಯ ಜನತಾ ಪಾರ್ಟಿ ವಿವಿಧ ಮೋರ್ಚಾಗಳ ಮೂಲಕ ಸರ್ವಸ್ಪರ್ಶಿ ಸರ್ವವ್ಯಾಪಿ ತತ್ವದಡಿ ಎಲ್ಲಾ ವರ್ಗದ ಜನತೆಯನ್ನು ಮುಖ್ಯವಾಹಿನಿಗೆ ತರುವ ಪ್ರಯತ್ನದಲ್ಲಿ ಯಶಸ್ಸನ್ನು ಕಾಣುತ್ತಿದೆ ಎಂದು ಅವರು ಹೇಳಿದರು.
ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಪಕ್ಷದ ಪೂರ್ವ ನಿಗದಿತ ಕಾರ್ಯಕ್ರಮಗಳಂತೆ ಅಂಬೇಡ್ಕರ್ ಜಯಂತಿಯನ್ನು ಜಿಲ್ಲಾ, ಮಂಡಲ, ಮಹಾ ಶಕ್ತಿಕೇಂದ್ರ ಹಾಗೂ ಬೂತ್ ಮಟ್ಟದಲ್ಲಿ ಆಚರಿಸಲಾಗುತ್ತಿದೆ. ಸಾಮಾಜಿಕ ನ್ಯಾಯಕ್ಕಾಗಿ ನಿರಂತರ ಹೋರಾಟ ನಡೆಸಿದ ಡಾ! ಬಾಬಾ ಸಾಹೇಬ್ ಅಂಬೇಡ್ಕರ್ ರವರು ಸಮಾನತೆಯ ಹೋರಾಟದ ಅಗ್ರಗಣ್ಯರು. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಕಾಂಗ್ರೆಸ್ ಅಂಬೇಡ್ಕರ್ ರವರನ್ನು ನಿರಂತರವಾಗಿ ಅವಮಾನಿಸುತ್ತಾ ಬಂದಿದೆ. ಎರಡು ಬಾರಿ ಚುನಾವಣೆಯಲ್ಲಿ ಉದ್ದೇಶಪೂರ್ವಕವಾಗಿ ಅಂಬೇಡ್ಕರ್ ರವರನ್ನು ಸೋಲಿಸಿದ ಕಾಂಗ್ರೆಸ್, ಅವರ ಮಹಾನ್ ಸಾಧನೆಗೆ ಭಾರತ ರತ್ನ ಗೌರವವನ್ನು ನೀಡದೇ ಇರುವುದು ಮಾತ್ರವಲ್ಲದೆ, ಕನಿಷ್ಠ ಅವರ ಅಂತ್ಯ ಸಂಸ್ಕಾರಕಕ್ಕೆ ದೆಹಲಿಯಲ್ಲಿ ಸ್ಥಳವನ್ನು ನೀಡದಿರುವುದು ಕರಾಳ ಇತಿಹಾಸ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಅಂಬೇಡ್ಕರ್ ರವರ ಜೀವನದ ಪ್ರಮುಖ ಸ್ಥಳಗಳನ್ನು ಪಂಚ ತೀರ್ಥ ಹೆಸರಿನಲ್ಲಿ ಅಭಿವೃದ್ಧಿಪಡಿಸಿ ಗೌರವ ಸೂಚಿಸಿದೆ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಎಸ್.ಸಿ. ಮೋರ್ಚಾ ಅಧ್ಯಕ್ಷ ಗೋಪಾಲ ಕಳಂಜಿ, ಬಿಜೆಪಿ ಉಡುಪಿ ನಗರಾಧ್ಯಕ್ಷ ಮಹೇಶ್ ಠಾಕೂರ್, ಬಿಜೆಪಿ ರಾಜ್ಯ ಕಾರ್ಯಕಾರಿಣಿ ಸದಸ್ಯ ಸುರೇಶ್ ಶೆಟ್ಟಿ ಗುರ್ಮೆ, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಸತ್ಯಾನಂದ ನಾಯಕ್, ಜಿಲ್ಲಾ ವಕ್ತಾರ ಗುರುಪ್ರಸಾದ್ ಶೆಟ್ಟಿ, ಜಿಲ್ಲಾ ಸಹ ವಕ್ತಾರ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ಮಾಧ್ಯಮ ಸಂಚಾಲಕ ಶ್ರೀನಿಧಿ ಹೆಗ್ಡೆ, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕ ಜಗದೀಶ್ ಆಚಾರ್ಯ ಕಪ್ಪೆಟ್ಟು, ಜಿಲ್ಲಾ ಹಿಂದುಳಿದ ವರ್ಗಗಳ ಮೋರ್ಚಾ ಅಧ್ಯಕ್ಷ ಸುರೇಂದ್ರ ಪಣಿಯೂರು, ಜಿಲ್ಲಾ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ಸದಾನಂದ ಕಾಪು, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಆಸೀಫ್ ಕಟಪಾಡಿ, ಬಿಜೆಪಿ ಉಡುಪಿ ನಗರ ಪ್ರಧಾನ ಕಾರ್ಯದರ್ಶಿ ದಿನೇಶ್ ಅಮೀನ್, ಪೆರ್ಡೂರು ಮಹಾ ಶಕ್ತಿಕೇಂದ್ರದ ಸಂಚಾಲಕ ಜಿಯಾನಂದ ಹೆಗ್ಡೆ, ಮಾಜಿ ನಗರಸಭಾ ಸದಸ್ಯೆ ಮಾಲತಿ ನಾಯ್ಕ್ ಹಾಗೂ ಪಕ್ಷದ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.