
ಉಡುಪಿ ಜುಲೈ 05 : ಜಿಲ್ಲೆಯಲ್ಲಿ ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ನಾಳೆ (ಜು.06) ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
ಉಡುಪಿ ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಹಲವಡೆ ಕೃತಕ ನೆರೆ ಉಂಟಾಗಿ ಮನೆಗಳಿಗೆ ನೀರು ನುಗ್ಗಿದೆ. ಇನ್ನು ಕೆಲವಡೆ ಹೆದ್ದಾರಿಗಳು, ರಸ್ತೆಗಳು ಜಲಾವೃತಗೊಂಡಿದೆ.ಈ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮಕ್ಕಳ ಹಿತದೃಷ್ಟಿಯಿಂದ ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಅಂಗನವಾಡಿ, ಸರಕಾರಿ, ಖಾಸಗಿ ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಹಾಗೂ ಪದವಿ ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಅವರು ಆದೇಶ ಹೊರಡಿಸಿದ್ದಾರೆ.
ಇನ್ನು ಜಿಲ್ಲೆಯಲ್ಲಿ ಮುಂದಿನ ಎರಡು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆ ಇರುವ ಕಾರಣ ಜುಲೈ 07 ರ ವರಿಗೆ ಈಗಾಗಲೇ ಆರೆಂಜ್ ಅಲರ್ಟ್ ಘೋಷಿಸಿ ಹವಮಾನ ಇಲಾಖೆ ಸೂಚನೆ ನೀಡಿದೆ. ಈ ನಡುವೆ ಕರ್ನಾಟಕ ಕರಾವಳಿಯಲ್ಲಿ ಮುಂದಿನ 5 ದಿನಗಳ ಕಾಲ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ