
News by: ಜನತಾಲೋಕವಾಣಿನ್ಯೂಸ್
ಉಡುಪಿ: ದೇಶದ ಆಂತರಿಕ ಭದ್ರತೆ, ಶಾಂತಿ ಸುವ್ಯವಸ್ಥೆಗೆ ಕಂಟಕವಾಗಿದ್ದ ಉಗ್ರ ಸಂಘಟನೆಗಳ ನಿಷೇಧ ಭಾರತದ ದೊಡ್ಡ ಗೆಲುವು ಎಂದು ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ. ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಅಧ್ಯಕ್ಷತೆಯಲ್ಲಿ ನಡೆದ ಪರಿಚಯ ವರ್ಗದ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಅನೇಕ ಮುಸಲ್ಮಾನರು ಕೂಡಾ ಪಿಎಫ್ಐ ನಂತಹ ಉಗ್ರಗಾಮಿ ಸಂಘಟನೆಗಳ ದೇಶ ವಿರೋಧಿ ಸಾಮಾಜಿಕ ಪಿಡುಗನ್ನು ನಿವಾರಿಸಬೇಕೆನ್ನುವ ಆಶಯ ಹೊಂದಿದ್ದರು. ಇಂದು ಇಡೀ ಸಮಾಜ ಒಂದಾಗಿದೆ ಎನ್ನುವುದಕ್ಕೆ ಇಂತಹ ನಿಷೇಧ ತಾಜಾ ಉದಾಹರಣೆ ಎಂದರು.
ಚುನಾವಣೆ ಗೆಲ್ಲುವ ಜೊತೆಗೆ ಸಾಮಾಜಿಕ ಪರಿವರ್ತನೆ ಕಾರ್ಯಕರ್ತರ ಉದ್ದೇಶವಾಗಿರಬೇಕು. 2023ರ ಚುನಾವಣೆಗೆ ಹೋಗಬೇಕೆಂದರೆ 2004ರ ಚುನಾವಣೆಯನ್ನು ನೆನಪಿಸಿಕೊಳ್ಳಬೇಕು. ಪ್ರಧಾನಿ ನರೇಂದ್ರ ಮೋದಿ ಆಡಳಿತಾವಧಿಯ ಸರ್ವವ್ಯಾಪಿ ಅಭಿವೃದ್ಧಿ ಹಾಗೂ ಹೊರ ದೇಶಗಳಲ್ಲಿ ಭಾರತದ ಘನತೆ, ಗೌರವ ವೃದ್ಧಿಯ ಬಗ್ಗೆ ಉತ್ತಮ ಅನಿಸಿಕೆ ವ್ಯಕ್ತವಾಗುತ್ತಿದೆ. ಸಿದ್ಧರಾಮಯ್ಯ ಮತ್ತು ಡಿಕೆಶಿ ನಡವಳಿಕೆಯಿಂದ ಅವರ ಮನಸ್ಥಿತಿ ಸಾಬೀತಾಗಿದೆ. 2023ರಲ್ಲಿ ಮಗದೊಮ್ಮೆ ರಾಜ್ಯದಲ್ಲಿ ಬಿಜೆಪಿ ನಿಶ್ಚಿತ ಗೆಲುವು ಸಾಧಿಸಲಿದೆ.
ಮೋದಿ ನೇತೃತ್ವದ ಕೇಂದ್ರ ಸರಕಾರ ಮತ್ತು ಬೊಮ್ಮಾಯಿ ನೇತೃತ್ವದ ರಾಜ್ಯ ಸರಕಾರದ ಉತ್ತಮ ಕೆಲಸ ಕಾರ್ಯಗಳಿಗೆ ಪ್ರಚಾರ ನೀಡುವ ಜೊತೆಗೆ ಸಕಾರಾತ್ಮಕ ಅಂಶಗಳನ್ನು ಮೈಗೂಡಿಸಿಕೊಂಡು ಪಕ್ಷ ಸಂಘಟನೆಯಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಾಗ ಯಶಸ್ಸು ಶತಸಿದ್ಧ ಎಂದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಹಾಗೂ ಮೈಸೂರ್ ಇಲೆಕ್ಟ್ರಿಕಲ್ಸ್ ಇಂಡಸ್ಟ್ರೀಸ್ ಲಿಮಿಟೆಡ್ ಅಧ್ಯಕ್ಷ ಕೆ.ಉದಯ ಕುಮಾರ್ ಶೆಟ್ಟಿ, ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಕೆ.ರಘುಪತಿ ಭಟ್, ಲಾಲಾಜಿ ಆರ್. ಮೆಂಡನ್, ಬಿ.ಎಮ್. ಸುಕುಮಾರ ಶೆಟ್ಟಿ, ಬಿಜೆಪಿ ರಾಜ್ಯ ಉಪಾಧ್ಯಕ್ಷೆ ನಯನಾ ಗಣೇಶ್, ನಿಕಟಪೂರ್ವ ರಾಜ್ಯ ಕಾರ್ಯದರ್ಶಿ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಕರ್ನಾಟಕ ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕುಮಾರ್ ಕೊಡ್ಗಿ, ಉಡುಪಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ್ ಎಸ್. ಕಲ್ಮಾಡಿ, ಬಿಜೆಪಿ ರಾಜ್ಯ ಎಸ್.ಸಿ. ಮೋರ್ಚಾ ಪ್ರಧಾನ ಕಾರ್ಯದರ್ಶಿ ದಿನಕರ ಬಾಬು, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಉಪಾಧ್ಯಕ್ಷ ಸಲೀಂ ಅಂಬಾಗಿಲು ಹಾಗೂ ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಮತ್ತು ಮಂಡಲಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಪ್ರಕೋಷ್ಠಗಳ ಸಂಯೋಜಕರು, ಜಿಲ್ಲಾ ಮಾಧ್ಯಮ ಮತ್ತು ಸಾಮಾಜಿಕ ಜಾಲತಾಣ ಪ್ರಕೋಷ್ಠಗಳ ಸಂಚಾಲಕರು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ಸದಾನಂದ ಉಪ್ಪಿನಕುದ್ರು ಸ್ವಾಗತಿಸಿ, ಕುತ್ಯಾರು ನವೀನ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.