ಉಡುಪಿ: ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರಕ್ಕೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಗರಿಷ್ಠ ಮತದಾನಗೈದಿರುವ ಪದವೀಧರ ಮತ್ತು ಶಿಕ್ಷಕ ಮತದಾರ ಬಾಂಧವರಿಗೆ ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಅಭಿನಂದನೆ ಸಲ್ಲಿಸಿದ್ದಾರೆ.
ಬಿಜೆಪಿ ಮತ್ತು ಎನ್‌ಡಿಎ ಅಭ್ಯರ್ಥಿಗಳ ಗೆಲುವಿಗೆ ಶೃದ್ಧೆಯಿಂದ ಶ್ರಮ ವಹಿಸಿ ತೊಡಗಿಸಿಕೊಂಡಿರುವ ಉಡುಪಿ, ದಕ್ಷಿಣ ಕನ್ನಡ, ಕೊಡಗು ಜಿಲ್ಲೆಗಳನ್ನೊಳಗೊಂಡ ಮಂಗಳೂರು ವಿಭಾಗದ ಜಿಲ್ಲಾಧ್ಯಕ್ಷರು, ಶಾಸಕರು, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಪ್ರಕೋಷ್ಠ, ಮಂಡಲಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತ ಬಂಧುಗಳಿಗೆ ಹೃತ್ಪೂರ್ವಕ ವಂದನೆಗಳನ್ನು ಸಲ್ಲಿಸುತ್ತೇನೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ವಿಕಸಿತ ಭಾರತ ಪರಿಕಲ್ಪನೆಯನ್ನು ಸಾಕಾರಗೊಳಿಸಲು ಬದ್ಧತೆಯಿಂದ ಶ್ರಮಿಸೋಣ ಎಂದು ಕೆ.ಉದಯ ಕುಮಾರ್ ಶೆಟ್ಟಿ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಸಮಿತಿಯ ಸಮಾಲೋಚನಾ ಸಭೆ
ಉಡುಪಿ: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುವ ಭಜನಾ ಕಮ್ಮಟ, ಭಜನಾ ತರಬೇತಿ, ಭಜನಾ ಮಂದಿರಗಳಿಗೆ ಸಹಾಯ ಹಸ್ತದ ಜೊತೆಗೆ ಶ್ರೀ ಮಂಜುನಾಥೇಶ್ವರ ಭಜನಾ ಪರಿಷತ್ ಕಾರ್ಯಕ್ರಮಗಳು ಭಜನಾ ಕ್ಷೇತ್ರದಲ್ಲಿ ಹೊಸ ಕ್ರಾಂತಿ ಮೂಡಿಸಿವೆ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃಧ್ಧಿ ಯೋಜನೆ(ರಿ.) ಉಡುಪಿ ಜಿಲ್ಲಾ ನಿರ್ದೇಶಕ ನಾಗರಾಜ್ ಶೆಟ್ಟಿ ಹೇಳಿದರು.
ಅವರು ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ (ರಿ.) ಉಡುಪಿ ಇದರ ಜಿಲ್ಲಾ ಕಛೇರಿಯಲ್ಲಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಭಜನಾ ಪರಿಷತ್ ಉಡುಪಿ ತಾಲೂಕು ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಅಧ್ಯಕ್ಷತೆಯಲ್ಲಿ ನಡೆದ ಉಡುಪಿ ತಾಲೂಕು ಭಜನಾ ಪರಿಷತ್ ಸಮಾಲೋಚನಾ ಸಭೆಯನ್ನು ಜ್ಯೋತಿ ಬೆಳಗಿಸಿ ಉದ್ಘಾಟಿಸಿ ಮಾತಾಡಿದರು.
ಶ್ರೀ ಕೃಷ್ಣನ ನೆಲೆವೀಡು ಉಡುಪಿ ಹಾಗೂ ತಾಲೂಕಿನಾದ್ಯಂತ ಪಸರಿಸಿರುವ ಗರಿಷ್ಠ ಭಜನಾ ಮಂಡಳಿಗಳನ್ನು ಒಗ್ಗೂಡಿಸಿ ಉಡುಪಿ ತಾಲೂಕು ಭಜನಾ ಪರಿಷತ್ತಿನಲ್ಲಿ ನೊಂದಾವಣೆಗೊಳಿಸುವ ಜೊತೆಗೆ ವಿನೂತನ ಕಾರ್ಯಕ್ರಮಗಳ ಮೂಲಕ ಭಜನಾ ಪರಿಷತ್ತನ್ನು ಸದೃಢವಾಗಿ ಬೆಳೆಸುವಲ್ಲಿ ಎಲ್ಲರೂ ಕೈ ಜೋಡಿಸಬೇಕು ಎಂದು ಅವರು ತಿಳಿಸಿದರು.
ಭಜನಾ ಪರಿಷತ್ ಉಡುಪಿ ಜಿಲ್ಲಾ ಸಮನ್ವಯಾಧಿಕಾರಿ ರಾಘವೇಂದ್ರ ಮುದ್ರಾಡಿ ಪ್ರಸ್ತಾವಿಕವಾಗಿ ಮಾತನಾಡಿ ಜಿಲ್ಲೆಯಾದ್ಯoತ ಭಜನಾ ಮಂಡಳಿಗಳನ್ನು ಭಜನಾ ಪರಿಷತ್ ಜೊತೆಗೆ ಸಂಘಟಿಸುವ ಮೂಲಕ ಸಮಾಜದಲ್ಲಿ ಭಜನೆಯನ್ನು ಇನ್ನಷ್ಟು ಪ್ರಚಲಿತಗೊಳಿಸಲು ಎಲ್ಲರೂ ಸಹಕರಿಸಬೇಕು ಎಂದರು.
ತಾಲೂಕು ಭಜನಾ ಪರಿಷತ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಮಾತನಾಡಿ ವಲಯ ಮಟ್ಟದಿಂದ ಭಜನಾ ಪರಿಷತ್ತನ್ನು ಸಂಘಟಿಸುವ ಅಗತ್ಯತೆಯ ಬಗ್ಗೆ ವಿವರಿಸಿ, ಮುಂದಿನ ಕಾರ್ಯ ಯೋಜನೆಗಳ ಬಗ್ಗೆ ವಿಸ್ತ್ರತ ಮಾಹಿತಿ ನೀಡಿದರು.
ತಾಲೂಕು ಭಜನಾ ಪರಿಷತ್ ಅಧ್ಯಕ್ಷ ವಿಜಯ ಶೆಟ್ಟಿ ಕೊಂಡಾಡಿ ಮಾತನಾಡಿ ಭಜನಾ ಪರಿಷತ್ ನೇತೃತ್ವದಲ್ಲಿ ನಡೆದ ವಿವಿಧ ಕಾರ್ಯಕ್ರಮಗಳ ಮಾಹಿತಿ ನೀಡಿ, ಭಜನಾ ಪರಿಷತ್ತಿನ ಮುಂದಿನ ಎಲ್ಲಾ ಕಾರ್ಯ ಚಟುವಟಿಕೆಗಳ ಯಶಸ್ವಿಗೆ ಎಲ್ಲರ ಸಹಕಾರವನ್ನು ಕೋರಿದರು.
ಈ ಸಂದರ್ಭದಲ್ಲಿ ಶ್ರೀ ಕ್ಷೇ.ಧ.ಗ್ರಾ. ಯೋಜನೆಯ ತಾಲೂಕು ಯೋಜನಾಧಿಕಾರಿ ರಾಮ ಎಮ್., ತಾಲೂಕು ಭಜನಾ ಪರಿಷತ್ತಿನ ಉಪಾಧ್ಯಕ್ಷರುಗಳಾದ ವಜ್ರಾಕ್ಷಿ ಪಿ. ದಾಸ್, ಸುಮಿತ್ರ ನಾಯ್ಕ್, ಸತೀಶ್ ಕುಮಾರ್ ಕೇದಾರ್, ಕೋಶಾಧಿಕಾರಿ ಪೂರ್ಣಿಮಾ ಪೆರ್ಡೂರು, ವಲಯ ಸಂಯೋಜಕಿಯರಾದ ಗೀತಾ, ಯಶೋದಾ, ಲಲಿತಾ, ಯೋಜನೆಯ ವಲಯ ಮೇಲ್ವಿಚಾರಕರುಗಳಾದ ಸುಜಾತ ಉಡುಪಿ, ಮಂಜುಳಾ ಮಣಿಪಾಲ, ಸುಜಾತ ಮಲ್ಪೆ, ಪವಿತ್ರ ಅಂಬಾಗಿಲು, ಮನೋರಮ ಪೆರ್ಡೂರು, ಕೃಷಿ ಮೇಲ್ವಿಚಾರಕ ಮಂಜುನಾಥ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸವಿತಾ ಹಾಗೂ ಇತರ ಪ್ರಮುಖರು ಉಪಸ್ಥಿತರಿದ್ದರು.
ಯೋಜನೆಯ ಹಿರಿಯಡ್ಕ ವಲಯ ಮೇಲ್ವಿಚಾರಕ ಸಂತೋಷ್ ಸ್ವಾಗತಿಸಿದರು. ಅಂಬಲಪಾಡಿ ವಲಯ ಮೇಲ್ವಿಚಾರಕಿ ಪ್ರೇಮ ಕಾರ್ಯಕ್ರಮ ನಿರೂಪಿಸಿ, ಉಪ್ಪೂರು ವಲಯ ಮೇಲ್ವಿಚಾರಕ ಮನೀಶ್ ವಂದಿಸಿದರು.
ಉಡುಪಿ: ಜೂನ್ 3ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಮೇ 27 ಸೋಮವಾರ ಮಧ್ಯಾಹ್ನ ಗಂಟೆ 2.00ಕ್ಕೆ ಉಡುಪಿಯ ಹೋಟೆಲ್ ಕಿದಿಯೂರು ಇದರ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಭಾಗವಹಿಸಿ ಸೂಕ್ತ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದ್ದಾರೆ.
ಈ ಸಮಾವೇಶದಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಸಹಿತ ಪಕ್ಷದ ಶಾಸಕರು ಮತ್ತು ಮುಖಂಡರು ಭಾಗವಹಿಸಲಿದ್ದಾರೆ.
ಉಡುಪಿ ಜಿಲ್ಲೆಯಾದ್ಯoತ ಮಂಡಲವಾರು ನೈರುತ್ಯ ಪದವೀಧರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಪ್ರತಿ 25 ಮತದಾರರ ಜವಾಬ್ದಾರಿಯನ್ನು ಹೊಂದಿರುವ ಘಟ ನಾಯಕರು ಹಾಗೂ ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ, ಮೋರ್ಚಾ, ಮಂಡಲ, ಪ್ರಕೋಷ್ಠಗಳ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಪಕ್ಷದ ಕಾರ್ಯಕರ್ತರು ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಣಿಪಾಲದ ರಜತಾದ್ರಿ ಬಳಿ ಇರುವ ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಪ್ರತಿಮೆಗೆ ಮಾಲಾರ್ಪಣೆಗೈದು ನಮನ ಸಲ್ಲಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ, ಮಾಜಿ ಸಚಿವ ಪ್ರಮೋದ್ ಮಧ್ವಾರಾಜ್, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಾಜಿ ಜಿಲ್ಲಾಧ್ಯಕ್ಷ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್, ನಿಕಟಪೂರ್ವ ಅಧ್ಯಕ್ಷ ದಾವೂದ್ ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಅವರು ಮಾಜಿ ಗೃಹ ಸಚಿವ ಕೀರ್ತಿಶೇಷ ಡಾ! ವಿ.ಎಸ್. ಆಚಾರ್ಯರವರ ಮನೆಗೆ ಭೇಟಿ ನೀಡಿ, ಡಾ! ವಿ.ಎಸ್. ಆಚಾರ್ಯರವರ ಭಾವಚಿತ್ರಕ್ಕೆ ನಮನ ಸಲ್ಲಿಸಿ, ಡಾ! ಆಚಾರ್ಯರವರ ಧರ್ಮಪತ್ನಿ ಶಾಂತ ವಿ. ಆಚಾರ್ಯರವರ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಸಚಿವ ಪ್ರಮೋದ್ ಮಧ್ವಾರಾಜ್, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಾಧ್ಯಮ ಪ್ರಮುಖ್ ಗಿರೀಶ್ ಎಮ್. ಅಂಚನ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಜಿಲ್ಲಾ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ರುಡಾಲ್ಫ್, ನಿಕಟಪೂರ್ವ ಅಧ್ಯಕ್ಷ ದಾವೂದ್ ಅಬೂಬಕರ್ ಮತ್ತಿತರರು ಉಪಸ್ಥಿತರಿದ್ದರು.
ಉಡುಪಿ: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ಡಾ! ಧನಂಜಯ ಸರ್ಜಿ ಹಾಗೂ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿಯಾಗಿ ಎಸ್.ಎಲ್. ಭೋಜೇಗೌಡ ಅವರು ಚುನಾವಣಾ ಕಣದಲ್ಲಿದ್ದಾರೆ. ಪಕ್ಷದ ಪರಂಪರೆಯಂತೆ ಈ ಬಾರಿಯೂ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗ ಭಾಗದ ಅಭ್ಯರ್ಥಿಯನ್ನು ಪಕ್ಷ ಆಯ್ಕೆ ಮಾಡಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಕಾರಣಕ್ಕೆ ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎನ್.ಡಿ.ಎ ಅಭ್ಯರ್ಥಿಯ ಸ್ಪರ್ಧೆಗೆ ಪಕ್ಷ ಅವಕಾಶ ನೀಡಿದೆ. ಪಕ್ಷದ ಅಧಿಕೃತ ಅಭ್ಯರ್ಥಿಗಳ ಘೋಷಣೆಯಾದ ಮೇಲೆ ಯಾವುದೇ ಗೊಂದಲಗಳಿಗೆ ಅವಕಾಶವಿರುವುದಿಲ್ಲ. ಈಗಾಗಲೇ ಈ ಎರಡೂ ಕ್ಷೇತ್ರಗಳ ಮತದಾರರ ಪಟ್ಟಿ ಜಿಲ್ಲೆಯ ಎಲ್ಲಾ ಮಂಡಲಗಳ ಮೂಲಕ ಬೂತ್ ಮಟ್ಟಕ್ಕೆ ತಲುಪಿದೆ. ಪಕ್ಷದ ಪ್ರಮುಖರು, ಎಲ್ಲಾ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ತಮ್ಮ ಬೂತ್ ವ್ಯಾಪ್ತಿಯಲ್ಲಿರುವ ಎರಡೂ ಕ್ಷೇತ್ರಗಳ ಮತದಾರರನ್ನು ಸಂಪರ್ಕಿಸಿ ಪಕ್ಷದ ಅಭ್ಯರ್ಥಿಗಳ ಪರ ಚುನಾವಣಾ ಪ್ರಚಾರವನ್ನು ತೀವ್ರಗೊಳಿಸುವ ಮೂಲಕ ಡಾ! ಧನಂಜಯ ಸರ್ಜಿ ಮತ್ತು ಎಸ್. ಎಲ್. ಭೋಜೇಗೌಡರವರ ಗೆಲುವಿಗೆ ಬದ್ಧತೆಯಿಂದ ಶ್ರಮಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದ್ದಾರೆ.
ಬಿಜೆಪಿ ಕಾರ್ಯಕರ್ತ ಆಧಾರಿತ ವಿಶ್ವದ ಅತೀ ದೊಡ್ಡ ರಾಜಕೀಯ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಪಕ್ಷದ ಕಾರ್ಯಕರ್ತರು ಮತ್ತು ಪಕ್ಷ ಒಂದೇ ಆಗಿದ್ದು, ಪಕ್ಷ ಕೈಗೊಂಡಿರುವ ತೀರ್ಮಾನವನ್ನು ಗೌರವಿಸುವುದು ಪ್ರತಿಯೊಬ್ಬ ನಿಷ್ಠಾವಂತ ಕಾರ್ಯಕರ್ತರ ಕರ್ತವ್ಯವಾಗಿದೆ. ಈ ನಿಟ್ಟಿನಲ್ಲಿ ಸಮಸ್ತ ಕಾರ್ಯಕರ್ತರು ವಿರೋಧಿಗಳ ಯಾವುದೇ ಅಪಪ್ರಚಾರಗಳಿಗೆ ಕಿವಿಗೊಡದೆ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎಂದು ಅವರು ಮನವಿ ಮಾಡಿದ್ದಾರೆ.
ಪಕ್ಷದ ಯಾವುದೇ ಪದಾಧಿಕಾರಿಗಳು ಅಥವಾ ಕಾರ್ಯಕರ್ತರು ಪಕ್ಷಕ್ಕೆ ಮುಜುಗರವನ್ನುಂಟುಮಾಡುವ ರೀತಿಯಲ್ಲಿ ವರ್ತಿಸಿ ಪಕ್ಷ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಲ್ಲಿ ಅಂತಹ ಯಾವುದೇ ಬೆಳವಣಿಗೆಯನ್ನು ಸಹಿಸಲು ಸಾಧ್ಯವಿಲ್ಲ. ಪಕ್ಷದ ತತ್ವ ಸಿದ್ಧಾಂತಗಳಡಿಯಲ್ಲಿ ಎಲ್ಲರೂ ಸಮಾನರಾಗಿದ್ದು, ಪಕ್ಷ ವಿರೋಧಿ ಚಟುವಟಿಕೆಗಳ ವಿರುದ್ಧ ಪಕ್ಷದ ಚೌಕಟ್ಟಿನೊಳಗೆ ಸೂಕ್ತ ಶಿಸ್ತು ಕ್ರಮವನ್ನು ಜರಗಿಸಲಾಗುವುದು.
ಜೂನ್ 4ರಂದು ಪ್ರಕಟಗೊಳ್ಳಲಿರುವ ಲೋಕಸಭಾ ಚುನಾವಣೆಯ ಫಲಿತಾಂಶದಲ್ಲಿ ಪಕ್ಷದ ಅಭ್ಯರ್ಥಿಯ ನಿಶ್ಚಿತ ಗೆಲುವಿನ ನಿರೀಕ್ಷೆಯೊಂದಿಗೆ ಜೂನ್ 3ರಂದು ನಡೆಯುವ ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿಗಳ ದೊಡ್ಡ ಅಂತರದ ಗೆಲುವಿಗೆ ಎಲ್ಲರೂ ಪಕ್ಷ ನಿಷ್ಠೆ ಮತ್ತು ಬದ್ಧತೆಯಿಂದ ಸಂಘಟಿತರಾಗಿ ಶ್ರಮಿಸಬೇಕು ಎಂದು ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಉಡುಪಿ: ನಿರಂತರ ಹತ್ಯೆ, ಅರಾಜಕತೆಯಿಂದ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ತೀವ್ರ ಹದಗೆಟ್ಟಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರದ ಅಸಮರ್ಥ ಗೃಹ ಸಚಿವರನ್ನು ವಜಾಗೊಳಿಸಬೇಕೆಂದು ಆಗ್ರಹಿಸಿ ಉಡುಪಿ ಜಿಲ್ಲಾ ಬಿಜೆಪಿ ಮಹಿಳಾ ಮೋರ್ಚಾ ವತಿಯಿಂದ ಕರ್ನಾಟಕ ರಾಜ್ಯಪಾಲರಿಗೆ ಬರೆದ ಮನವಿ ಪತ್ರವನ್ನು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಇವರ ನೇತೃತ್ವದಲ್ಲಿ ಉಡುಪಿ ಜಿಲ್ಲಾಧಿಕಾರಿಗಳಿಗೆ ಹಸ್ತಾಂತರಿಸಲಾಯಿತು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ಸಂಧ್ಯಾ ರಮೇಶ್, ರಾಜ್ಯ ಮಹಿಳಾ ಮೋರ್ಚಾ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಜಿಲ್ಲಾ ಮಹಿಳಾ ಮೋರ್ಚಾ ನಿಕಟಪೂರ್ವ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ, ಜಿಲ್ಲಾ ಮಹಿಳಾ ಮೋರ್ಚಾ ಪ್ರಧಾನ ಪ್ರಧಾನ ಕಾರ್ಯದರ್ಶಿಗಳಾದ ನಳಿನಿ ಪ್ರದೀಪ್ ರಾವ್, ಅನಿತಾ ಮರವಂತೆ, ಬಿಜೆಪಿ ಜಿಲ್ಲಾ ಕಾರ್ಯದರ್ಶಿ ಅನಿತಾ ಶ್ರೀಧರ್, ಉಡುಪಿ ನಗರ ಉಪಾಧ್ಯಕ್ಷೆ ದಯಾಶಿನಿ ಪಂದುಬೆಟ್ಟು, ಉಡುಪಿ ಗ್ರಾಮಾಂತರ ನಿಕಟಪೂರ್ವ ಅಧ್ಯಕ್ಷೆ ವೀಣಾ ನಾಯ್ಕ್, ಕಾರ್ಯದರ್ಶಿ ಮಮತಾ ಶೆಟ್ಟಿ, ಮಹಿಳಾ ಮೋರ್ಚಾ ಉಡುಪಿ ನಗರ ಅಧ್ಯಕ್ಷೆ ಅಶ್ವಿನಿ ಆರ್. ಶೆಟ್ಟಿ, ಉಪಾಧ್ಯಕ್ಷೆ ಸುಧಾ ಪೈ, ಪ್ರಧಾನ ಕಾರ್ಯದರ್ಶಿ ಸರೋಜಾ ಹೆಗ್ಡೆ, ಕಾರ್ಯಕಾರಿಣಿ ಸದಸ್ಯರಾದ ದೀಪಾ ಪೈ, ವಿದ್ಯಾ, ಉಡುಪಿ ಗ್ರಾಮಾಂತರ ಅಧ್ಯಕ್ಷೆ ರಮ್ಯಾ ರಾವ್, ಕೋಶಾಧಿಕಾರಿ ಶೈಲಾ, ಕಾಪು ಅಧ್ಯಕ್ಷೆ ನೀತಾ ಗುರುರಾಜ್, ಬಿಜೆಪಿ ಜಿಲ್ಲಾ ಮಾಧ್ಯಮ ಪ್ರಮುಖ್ ಶ್ರೀನಿಧಿ ಹೆಗ್ಡೆ, ಕಾಪು ಮಂಡಲ ಪ್ರಧಾನ ಕಾರ್ಯದರ್ಶಿ ಮಟ್ಟು ಗೋಪಾಲಕೃಷ್ಣ ರಾವ್ ಹಾಗೂ ಮಹಿಳಾ ಮೋರ್ಚಾ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಜೂನ್ 3ರಂದು ನಡೆಯಲಿರುವ ವಿಧಾನ ಪರಿಷತ್ ಚುನಾವಣೆಯಲ್ಲಿ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ. ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕರೆ ನೀಡಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ದುಡಿದ ಕಾರ್ಯಕರ್ತರಿಗೆ ಧನ್ಯವಾದ ಸಮರ್ಪಣೆ ಮತ್ತು ವಿಧಾನಪರಿಷತ್ ಚುನಾವಣಾ ಪೂರ್ವಸಿದ್ಧತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಇತ್ತೀಚೆಗೆ ನಡೆದ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣೆಯಲ್ಲಿ ಸಂಘಟಿತರಾಗಿ ತೊಡಗಿಸಿಕೊಂಡ ಪಕ್ಷದ ಕಾರ್ಯಕರ್ತರ ಪರಿಶ್ರಮ ಅಭಿನಂದನನೀಯ. ಚುನಾವಣೆಯಲ್ಲಿ ದೊಡ್ಡ ಅಂತರದ ಗೆಲುವಿನ ನಿರೀಕ್ಷೆ ಇದೆ. ಕ್ಷೇತ್ರದ ಅಭಿವೃದ್ಧಿಗಾಗಿ ನಿಷ್ಠೆಯಿಂದ ಕೆಲಸ ಮಾಡುತ್ತೇನೆ. ಎಲ್ಲರ ಪ್ರೋತ್ಸಾಹ, ಬೆಂಬಲ ಸದಾ ಇರಲಿ ಎಂದರು.
ವಿಧಾನ ಪರಿಷತ್ ಚುನಾವಣೆಯ ನೈರುತ್ಯ ಪದವೀಧರ ಕ್ಷೇತ್ರಕ್ಕೆ ಶಿವಮೊಗ್ಗ ಭಾಗದ ಅಭ್ಯರ್ಥಿಗಳೇ ಬಿಜೆಪಿ ಅಭ್ಯರ್ಥಿಗಳಾಗಿರುವುದು ಇತಿಹಾಸ. ಡಿ.ಹೆಚ್. ಶಂಕರಮೂರ್ತಿಯವರು ಸುದೀರ್ಘ 30 ವರ್ಷಗಳ ಅವಧಿಗೆ ಇದೇ ಕ್ಷೇತ್ರದಿಂದ ವಿಧಾನ ಪರಿಷತ್ ಸದಸ್ಯರಾಗಿದ್ದರು. ಈ ಬಾರಿ ಡಾ! ಧನಂಜಯ ಸರ್ಜಿ ಅವರು ಬಿಜೆಪಿ ಅಭ್ಯರ್ಥಿಯಾಗಿದ್ದಾರೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಕಾರಣಕ್ಕೆ ನೈರುತ್ಯ ಶಿಕ್ಷಕರ ಕ್ಷೇತ್ರವನ್ನು ಎನ್.ಡಿ.ಎ ಅಭ್ಯರ್ಥಿಯಾಗಿ ಎಸ್.ಎಲ್ ಭೋಜೇಗೌಡ ಅವರು ಸ್ಪರ್ಧಿಸಲು ಬಿಟ್ಟುಕೊಡಲಾಗಿದೆ. ಪಕ್ಷದ ಪರಂಪರೆಯಂತೆ ಅಭ್ಯರ್ಥಿ ಘೋಷಣೆಯಾದ ಬಳಿಕ ಯಾವುದೇ ಗೊಂದಲ ಉಳಿದಿಲ್ಲ. ಜಿಲ್ಲೆಯ ಎಲ್ಲಾ ಶಾಸಕರು, ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಒಟ್ಟಾಗಿ ಒಂದಾಗಿ ವಿಧಾನಪರಿಷತ್ ಚುನಾವಣೆಯನ್ನು ಯಶಸ್ವಿಯಾಗಿ ನಿಭಾಯಿಸಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಬದ್ಧತೆಯಿಂದ ಶ್ರಮಿಸಬೇಕು ಎಂದು ಕೋಟ ವಿನಂತಿಸಿದರು.
*ಲೋಕಸಭಾ ಚುನಾವಣೆಯ ಯಶಸ್ಸಿಗೆ ಶ್ರಮಿಸಿದ ಕಾರ್ಯಕರ್ತರಿಗೆ ಕೃತಜ್ಞತೆ*:.ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮಾತನಾಡಿ, ಲೋಕಸಭಾ ಚುನಾವಣೆಯನ್ನು ಸವಾಲಾಗಿ ಸ್ವೀಕರಿಸಿ ಪಕ್ಷದ ಅಭ್ಯರ್ಥಿಯ ಗೆಲುವಿಗೆ ಬದ್ಧತೆಯಿಂದ ಶ್ರಮಿಸಿರುವ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಚುನಾವಣಾ ನಿರ್ವಹಣಾ ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರಿಗೆ ಪಕ್ಷದ ವತಿಯಿಂದ ಹೃತ್ಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆ. ಪಕ್ಷದ ನೇತೃತ್ವದಲ್ಲಿ ನಡೆದ ವಿವಿಧ ಮೋರ್ಚಾಗಳ ಸಮಾವೇಶಗಳು, ಬೈಕ್ ರ್ಯಾಲಿ, ರೋಡ್ ಶೋಗಳು ಮತ್ತು ಮನೆ ಮನೆ ಪ್ರಚಾರ ಪಕ್ಷದ ಗೆಲುವಿಗೆ ಪೂರಕ ವಾತಾವರಣ ನಿರ್ಮಿಸಿವೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಕನಿಷ್ಠ ಒಂದೂವರೆ ಲಕ್ಷಕ್ಕೂ ಮಿಕ್ಕಿದ ಮತಗಳ ಅಂತರದಿಂದ ಗೆಲುವು ಸಾಧಿಸುವುದು ನಿಶ್ಚಿತ ಎಂದರು.
*ಪಕ್ಷ ವಿರೋಧಿ ಚಟುವಟಿಕೆ ಸಹಿಸಲಾಗದು, ನಿರ್ದಾಕ್ಷಿಣ್ಯ ಕ್ರಮ*: ವಿಧಾನ ಪರಿಷತ್ ಚುನಾವಣೆಗೆ ಪಕ್ಷದ ಅಭ್ಯರ್ಥಿಗಳ ಘೋಷಣೆಯಾಗಿದೆ. ಈಗಾಗಲೇ ಚುನಾವಣಾ ಕೆಲಸ ಕಾರ್ಯಗಳು ವೇಗ ಪಡೆದಿವೆ. ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ. ಕಾರ್ಯಕರ್ತರೇ ಪಕ್ಷದ ಜೀವಾಳ. ಯಾವುದೇ ಪಕ್ಷ ವಿರೋಧಿ ಚಟುವಟಿಕೆಗಳನ್ನು ಸಹಿಸಲು ಸಾಧ್ಯವಿಲ್ಲ. ಅಂತಹ ಸನ್ನಿವೇಶದಲ್ಲಿ ಪಕ್ಷದ ಚೌಕಟ್ಟಿನೊಳಗೆ ಸೂಕ್ತ ಶಿಸ್ತು ಕ್ರಮವನ್ನು ಕೈಗೊಳ್ಳಲಾಗುವುದು. ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್‌ಡಿಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಸಂಘಟಿತರಾಗಿ ಬದ್ಧತೆಯಿಂದ ತೊಡಗಿಸಿಕೊಳ್ಳಬೇಕು ಎಂದು ಕಿಶೋರ್ ಕುಮಾರ್ ಕುಂದಾಪುರ ಕರೆ ನೀಡಿದರು.
ಉಡುಪಿ ಶಾಸಕ ಯಶ್ಪಾಲ್ ಎ. ಸುವರ್ಣ ಮಾತನಾಡಿ ಲೋಕಸಭಾ ಚುನಾವಣೆಯಲ್ಲಿ ಪಕ್ಷದ ಕಾರ್ಯಕರ್ತರು ಅತ್ಯಂತ ಹುಮ್ಮಸ್ಸಿನಿಂದ ತೊಡಗಿಸಿಕೊಂಡಿದ್ದು ಪಕ್ಷದ ಅಭ್ಯರ್ಥಿ ಕೋಟರವರು ಗರಿಷ್ಠ ಅಂತರಗಳ ಮತದಿಂದ ಗೆಲ್ಲುವ ನಿರೀಕ್ಷೆ ಇದೆ. ರಾಷ್ಟ್ರೀಯ ಸ್ವಯಂಸೇವಕ ಸಂಘದ ಶಿಕ್ಷಣವನ್ನು ಪಡೆದು ಮುಖ್ಯ ಶಿಕ್ಷಕನಾಗಿ ಸೇವೆ ಸಲ್ಲಿಸಿ, ಪ್ರಸಕ್ತ ಶಿವಮೊಗ್ಗ ಜಿಲ್ಲಾ ಬಿಜೆಪಿಯ ಉಪಾಧ್ಯಕ್ಷರಾಗಿರುವ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ! ಧನಂಜಯ ಸರ್ಜಿ ಹಾಗೂ ಹಾಲಿ ವಿಧಾನ ಪರಿಷತ್ ಸದಸ್ಯರಾಗಿರುವ ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ.ಎ ಅಭ್ಯರ್ಥಿ ಎಸ್.ಎಲ್. ಭೋಜೇಗೌಡ ಅವರ ಗೆಲುವಿಗೆ ಪಕ್ಷದ ಕಾರ್ಯಕರ್ತರು ಪಕ್ಷ ನಿಷ್ಠೆಯಿಂದ ಪ್ರಾಮಾಣಿಕವಾಗಿ ತೊಡಗಿಸಿಕೊಳ್ಳಬೇಕು ಎಂದರು.
ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಮಾತನಾಡಿ ಈ ವಿಧಾನ ಪರಿಷತ್ ಚುನಾವಣೆ ಮುoಬರಲಿರುವ ಎಲ್ಲಾ ಚುನಾವಣೆಗಳಿಗೆ ಅಡಿಪಾಯವಿದ್ದಂತೆ. ಚುನಾವಣೆ ಎಂದರೆ ಯುದ್ಧ ಎದುರಿಸಿದಂತೆ. ಶಿಸ್ತಿನ ಪಕ್ಷ ಬಿಜೆಪಿಯಲ್ಲಿ ಸೈದ್ದಾಂತಿಕ ಚುನಾವಣೆಯನ್ನು ಯಾವುದೇ ಹಿನ್ನಡೆಯಾಗದ ರೀತಿಯಲ್ಲಿ ನಿಭಾಯಿಸುವುದು ನಮೆಲ್ಲರ ಕರ್ತವ್ಯವಾಗಿದೆ. ಅಭ್ಯರ್ಥಿಯ ಘೋಷಣೆಯಾದ ಬಳಿಕ ಪಕ್ಷಕ್ಕಾಗಿ ಕೆಲಸ ಮಾಡಬೇಕು. ಯಾವುದೇ ಗೊಂದಲವಿಲ್ಲದೆ ಪ್ರಾಮಾಣಿಕವಾಗಿ ಜವಾಬ್ದಾರಿಯನ್ನು ನಿರ್ವಹಿಸಿ ಪಕ್ಷಕ್ಕೆ ಮುಜುಗರವಾಗದ ರೀತಿಯಲ್ಲಿ ನಡೆದುಕೊಂಡು ಪಕ್ಷದ ಅಭ್ಯರ್ಥಿಯ ಗೆಲುವಿಗೆ ಎಲ್ಲರೂ ಬದ್ಧತೆಯಿಂದ ಕೈಜೋಡಿಸಬೇಕು ಎಂದರು.
ಮಾಜಿ ಸಚಿವ ಹಾಗೂ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಮೋದ್ ಮಧ್ವರಾಜ್ ಮಾತನಾಡಿ ಲೋಕಸಭಾ ಚುನಾವಣೆಗೆ ಪಕ್ಷ ಒಳ್ಳೆಯ ಅಭ್ಯರ್ಥಿಯನ್ನು ನೀಡಿದ್ದು ಪಕ್ಷದ ಸಮಸ್ತ ಕಾರ್ಯಕರ್ತರು ಪ್ರಾಮಾಣಿಕವಾಗಿ ದುಡಿದಿದ್ದಾರೆ. ಸರಳ ಸಜ್ಜನಿಕೆಯ ಅನುಭವಿ ರಾಜಕಾರಣಿ ಕೋಟರವರ ಗೆಲುವು ನಿಶ್ಚಿತ. ಅಪಾರ ಶ್ರದ್ಧೆ ಮತ್ತು ಕಾರ್ಯ ತತ್ಪರತೆಯಿಂದ ಅವರು ಭವಿಷ್ಯದಲ್ಲಿ ಅತ್ಯುನ್ನತ ಸ್ಥಾನವನ್ನು ಅಲಂಕರಿಸಲಿದ್ದಾರೆ. ಬಿಜೆಪಿ ಶಿಸ್ತಿನ ಪಕ್ಷ. ವ್ಯಕ್ತಿಗಿಂತ ಪಕ್ಷ ಮುಖ್ಯ, ಪಕ್ಷಕ್ಕಿಂತ ದೇಶ ಮುಖ್ಯ ಎನ್ನುವ ತತ್ವ ಸಿದ್ದಾಂತವನ್ನು ಮೆಚ್ಚಿ ನಾನು ಬಿಜೆಪಿಗೆ ಸೇರ್ಪಡೆಗೊಂಡವನು. ಪಕ್ಷದಲ್ಲಿ ಅಂತಹ ಉದಾತ್ತ ತತ್ವಕ್ಕೆ ಎಂದೂ ಘಾಸಿಯಾಗದು ಎಂಬುದು ನನ್ನ ನಂಬಿಕೆ. ವಿಧಾನ ಪರಿಷತ್ ಚುನಾವಣೆಯ ಎರಡೂ ಅಭ್ಯರ್ಥಿಗಳ ಗೆಲುವಿಗೆ ಕಂಕಣಬದ್ಧರಾಗಿ ಶ್ರಮಿಸೋಣ ಎಂದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಮಾತನಾಡಿ, ಬಿಜೆಪಿ ಕಾರ್ಯಕರ್ತ ಆಧಾರಿತ ಪಕ್ಷ. ಒಂದು ಕಾಲದಲ್ಲಿ ಕೇವಲ 2 ಸ್ಥಾನಗಳನ್ನು ಗಳಿಸಿದ್ದ ಬಿಜೆಪಿ ಇಂದು ಸಂಘಟನಾ ಸಾಮರ್ಥ್ಯದಿಂದ ದೇಶದಾದ್ಯಂತ 300ಕ್ಕೂ ಹೆಚ್ಚು ಸ್ಥಾನಗಳನ್ನು ಜಯಿಸಿದೆ. ಪಕ್ಷದ ತೀರ್ಮಾನವೇ ಅಂತಿಮವಾಗಿದ್ದು ನಿಷ್ಠಾವಂತ ಕಾರ್ಯಕರ್ತರು ಅದನ್ನು ಗೌರವಿಸಿ ಪಕ್ಷದ ಗೆಲುವಿಗೆ ಶ್ರಮಿಸಬೇಕಾಗಿದೆ. ಅದೆಷ್ಟೋ ಮಂದಿ ಸಮರ್ಥ ಕಾರ್ಯಕರ್ತರಿಗೆ ಇಂದು ಯಾವುದೇ ಸೂಕ್ತ ಅವಕಾಶಗಳು ಸಿಗದೇ ಇರಬಹುದು. ತಾಳ್ಮೆ ಮತ್ತು ಸಮಾಧಾನದಿಂದ ಎಲ್ಲವನ್ನೂ ಸಾಧಿಸಲು ಸಾಧ್ಯವಿದೆ. ಪಕ್ಷದ ಪರ ಧನಾತ್ಮಕ ಚಿಂತನೆಯೊಂದಿಗೆ ಕಾರ್ಯಪ್ರವೃತ್ತರಾದಾಗ ಗೆಲುವಿನ ದಾರಿ ಸುಗಮವಾಗುತ್ತದೆ. ಈ ನಿಟ್ಟಿನಲ್ಲಿ ಜೂನ್ 3 ಮತ್ತು 4 ಬಿಜೆಪಿ ಪಾಲಿಗೆ ಅತ್ಯಂತ ಮಹತ್ವಪೂರ್ಣ ದಿನಗಳಾಗಿದ್ದು, ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಎಲ್ಲರೂ ಸಂಘಟಿತರಾಗಿ ಬದ್ಧತೆಯಿಂದ ತೊಡಗಿಸಿಕೊಳ್ಳೋಣ ಎಂದರು.
ಲೋಕಸಭಾ ಚುನಾವಣೆಯ ಅವಲೋಕನ ಹಾಗೂ ವಿಧಾನ ಪರಿಷತ್ ಚುನಾವಣಾ ಪೂರ್ವ ಸಿದ್ಧತೆಗಳ ಬಗ್ಗೆ ಮಂಡಲಗಳ ಅಧ್ಯಕ್ಷರು ವರದಿಯನ್ನು ಮಂಡಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಮಂಗಳೂರು ವಿಭಾಗ ಸಂಘಟನಾ ಪ್ರಧಾನ ಕಾರ್ಯದರ್ಶಿ ಪ್ರಸಾದ್ ಕುಮಾರ್, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಪಕ್ಷದ ಪ್ರಮುಖರು, ಬಿಜೆಪಿ ಜಿಲ್ಲಾ ಪದಾಧಿಕಾರಿಗಳು, ಜಿಲ್ಲಾ ಮೋರ್ಚಾ ಹಾಗೂ ಮಂಡಲಗಳ ಅಧ್ಯಕ್ಷರು ಮತ್ತು ಪ್ರಧಾನ ಕಾರ್ಯದರ್ಶಿಗಳು, ಜಿಲ್ಲಾ ಮತ್ತು ಮಂಡಲಗಳ ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಉಡುಪಿ: ರಾಜ್ಯದ ಜನತೆಯನ್ನು ಬೆಚ್ಚಿ ಬೀಳಿಸಿದ ಹುಬ್ಬಳ್ಳಿಯ ಕಾಲೇಜು ವಿದ್ಯಾರ್ಥಿನಿ ನೇಹಾ ಹಿರೇಮಠ್ ಅಮಾನುಷ ಹತ್ಯೆಯ ನೆನಪು ಮಾಸುವ ಮುನ್ನ ಅದೇ ಮಾದರಿಯಲ್ಲಿ ಹುಬ್ಬಳ್ಳಿಯ ವೀರಪುರ ಓಣಿಯಲ್ಲಿ ಅಂಜಲಿ ಅಂಬಿಗೇರ ಎಂಬ ಯುವತಿಯ ಕೊಲೆಯಾಗಿದೆ. ಈ ಘಟನೆಯನ್ನು ಉಡುಪಿ ಜಿಲ್ಲಾ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ. ಹತ್ಯೆ ಪ್ರಕರಣಗಳನ್ನು ಪರಿಣಾಮಕಾರಿಯಾಗಿ ನಿಭಾಯಿಸದ ರಾಜ್ಯ ಗೃಹ ಸಚಿವರು ತಕ್ಷಣ ರಾಜಿನಾಮೆ ಸಲ್ಲಿಸಬೇಕು ಎಂದು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ.ಉದಯ ಕುಮಾರ್ ಶೆಟ್ಟಿ ಆಗ್ರಹಿಸಿದ್ದಾರೆ.
ಅವರು ಬಿಜೆಪಿ ಉಡುಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಮಾತನಾಡಿದರು.
ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ರಾಜ್ಯದ ಅಭಿವೃದ್ಧಿಯನ್ನು ಮರೆತಿರುವ ಜೊತೆಗೆ ಕನಿಷ್ಠ ಪಕ್ಷ ರಾಜ್ಯದ ಜನತೆಯ ಪ್ರಾಣ ರಕ್ಷಣೆಗೂ ಬೆಲೆ ನೀಡುತ್ತಿಲ್ಲ ಎಂದು ಅವರು ತಿಳಿಸಿದರು.
ಹುಬ್ಬಳ್ಳಿಯ ವೀರಾಪುರದ 21 ವರ್ಷದ ಅಂಜಲಿ ಅಂಬಿಗೇರ ಎಂಬ ಯುವತಿಯನ್ನು ಗಿರೀಶ್ ಅಲಿಯಾಸ್ ವಿಶ್ವ ಎಂ. ಸಾವಂತ್ ಎಂಬಾತ ಮೇ 15ರ ಮುಂಜಾನೆ ಆಕೆಯನ್ನು ಮನೆಯ ಹೊಸ್ತಿಲಲ್ಲೇ ಬರ್ಬರವಾಗಿ ಹತ್ಯೆಗೈದಿರುವುದು ನಾಗರಿಕ ಸಮಾಜವನ್ನು ಮತ್ತೊಮ್ಮೆ ಭಯಭೀತಿಯಲ್ಲಿ ನಲುಗುವಂತೆ ಮಾಡಿದೆ.
ನೇಹಾ ಹಿರೇಮಠ್ ಹತ್ಯೆ ಪ್ರಕರಣವನ್ನು ಸಾಮಾನ್ಯ ಘಟನೆ ಎಂದಿರುವ ಗೃಹ ಸಚಿವರು ಮತ್ತು ರಾಜ್ಯ ಸರಕಾರದ ಲಘು ಹೇಳಿಕೆಗಳು ಹಾಗೂ ಆರೋಪಿಯ ವಿರುದ್ಧ ಯಾವುದೇ ಕಠಿಣ ಕ್ರಮ ಜರಗಿಸದೇ ಇರುವುದು ಇಂತಹ ಹೇಯ ಕೃತ್ಯಗಳ ಪುನರಾವರ್ತನೆಗೆ ಮುಖ್ಯ ಕಾರಣವಾಗಿದೆ ಎಂದರು.
*ಅಸಮರ್ಥ ಸರ್ಕಾರ, ಅಭಿವೃದ್ಧಿ ಶೂನ್ಯ ಸರ್ಕಾರ* :
ಪ್ರಸಕ್ತ ರಾಜ್ಯದಲ್ಲಿರುವುದು ಅಸಮರ್ಥ ಮತ್ತು ಅಭಿವೃದ್ಧಿ ಶೂನ್ಯ ಕಾಂಗ್ರೆಸ್ ಸರಕಾರ ಎಂಬುದು ಪದೇ ಪದೇ ಸಾಬೀತಾಗುತ್ತಿದೆ. ಕಳೆದ 11 ತಿಂಗಳಲ್ಲಿ ಕರ್ನಾಟಕದಲ್ಲಿ ಕಾನೂನು ಸುವ್ಯವಸ್ಥೆ ತೀರಾ ಹದಗೆಟ್ಟಿರುವುದು ಕಂಡುಬರುತ್ತಿದೆ. ರಾಜ್ಯ ಸರಕಾರವು ಜನರನ್ನು ಭಯದ ವಾತಾವರಣದಲ್ಲಿ ಬದುಕುವ ದಾರುಣ ಸ್ಥಿತಿಗೆ ತಲುಪಿಸಿದೆ ಎಂದರು.
ರಾಜ್ಯದಲ್ಲಿ ಪದೇ ಪದೇ ಮಹಿಳೆಯರ ಮೇಲೆ ದೌರ್ಜನ್ಯ, ಹಲ್ಲೆ ಹಾಗೂ ಅಮಾನುಷ ಹತ್ಯೆ ಅವ್ಯಾಹತವಾಗಿ ನಡೆಯುತ್ತಿದೆ. ಸರಕಾರದ ಅಸಮರ್ಥ ಆಡಳಿತ ಮತ್ತು ಕಾನೂನು ಸುವ್ಯವಸ್ಥೆಯನ್ನು ಹೇಗೆ ಹತೋಟಿಗೆ ತರಬೇಕೆಂಬ ಸಾಮರ್ಥ್ಯವೇ ಇಲ್ಲದ ಗೃಹ ಸಚಿವರು ತಮ್ಮ ಅಸಹಾಯಕತೆಯನ್ನು ಒಪ್ಪಿಕೊಂಡಂತಿದೆ. ಪರಿಸ್ಥಿತಿಯ ಅವಲೋಕನ ಮಾಡಲೂ ಅಸಮರ್ಥವಾಗಿರುವ ರಾಜ್ಯ ಸರಕಾರದ ನಿಷ್ಕ್ರಿಯತೆಯಿಂದ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ ಎಂದು ಅವರು ತಿಳಿಸಿದರು.
ಒಂದು ಕಾಲದಲ್ಲಿ ದೆಹಲಿ, ಮಹಾರಾಷ್ಟ್ರ ಮತ್ತು ಕರ್ನಾಟಕ ಪೊಲೀಸ್ ಇಲಾಖೆ ದಕ್ಷತೆಯಲ್ಲಿ ಒಂದಕ್ಕೊಂದು ಪೈಪೋಟಿ ನೀಡುವಂತಿತ್ತು. ಪ್ರತಿಯೊಂದು ವಿಚಾರದಲ್ಲೂ ರಾಜಕೀಯ ಲಾಭದ ಹುನ್ನಾರ, ಓಟ್ ಬ್ಯಾಂಕ್ ಸಂರಕ್ಷಣೆಯ ಕಾರಣಕ್ಕೆ ಹಿಂದೆ ಕಾನೂನು ಸುವ್ಯವಸ್ಥೆಗೆ ಹೆಸರುವಾಸಿಯಾಗಿದ್ದ ಕರ್ನಾಟಕ ರಾಜ್ಯವು ಇವತ್ತು ಗೂಂಡಾರಾಜ್ಯವಾಗಿ ಮತ್ತು ಕೊಲೆಗಡುಕರ ರಾಜ್ಯವಾಗಿ ಪರಿವರ್ತನೆಗೊಂಡಿರುವುದು ವಿಷಾಧನೀಯ ಎಂದರು.
ಒಂದು ಅಂಕಿ ಅಂಶದ ಪ್ರಕಾರ, ಸಿಟಿ ಕ್ರೈಮ್ ಬ್ಯೂರೋ ಮತ್ತು ನ್ಯಾಷನಲ್ ಕ್ರೈಮ್ ಬ್ಯೂರೋ ಪ್ರಕಾರ ಕಳೆದ 11 ತಿಂಗಳಲ್ಲಿ ಶೇ.60ಕ್ಕಿಂತ ಹೆಚ್ಚು ಈ ರೀತಿಯ ಕ್ರಿಮಿನಲ್ ಚಟುವಟಿಕೆಗಳು ನಡೆಯುತ್ತಿರುವುದು ಕಂಡುಬಂದಿದೆ. ವಿಶೇಷವಾಗಿ ಮಹಿಳೆಯರ ಮೇಲಿನ ಅಮಾನುಷ ಕೃತ್ಯಗಳು ದಿನೇ ದಿನೇ ಹೆಚ್ಚುತ್ತಿರುವುದು ಕಳವಳಕಾರಿ ಎನಿಸಿದೆ. ಇಂತಹ ಘಟನೆಗಳಿಗೆ ಕಾಂಗ್ರೆಸ್ ನೇತೃತ್ವದ ರಾಜ್ಯ ಸರಕಾರವೇ ಮುಖ್ಯ ಕಾರಣವಾಗಿದೆ. ರಾಜ್ಯ ಸರಕಾರ ಒಂದೇ ವರ್ಗದ ಅತಿಯಾದ ಓಲೈಕೆಯಿಂದ ದೃಢ ನಿರ್ಧಾರ ತೆಗೆದುಕೊಳ್ಳದ ಕಾರಣ ಪದೇ ಪದೇ ಸಮಾಜದಲ್ಲಿ ಇಂತಹ ದುರ್ಘಟನೆಗಳು ಹೆಚ್ಚುತ್ತಿವೆ ಎಂದರು.
ಹುಬ್ಬಳ್ಳಿಯ ಅಂಜಲಿಯ ಹತ್ಯೆ ಪ್ರಕರಣಕ್ಕೂ ಮೊದಲು ನೇಹಾ ಹತ್ಯೆ ಪ್ರಕರಣ, ಬೆಳಗಾವಿಯಲ್ಲಿ ನಡೆದ ದಲಿತ ಮಹಿಳೆಯ ವಿವಸ್ತ್ರಗೊಳಿಸಿದ ಅಮಾನವೀಯ ಘಟನೆ, ರೊಟ್ಟಿ ಕೇಳಿದ ದಲಿತ ಯುವಕನ ಹತ್ಯೆ ಮುಂತಾದ ಘಟನೆಗಳು ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟು ಆಡಳಿತ ಯಂತ್ರ ಸಂಪೂರ್ಣ ಹಳಿ ತಪ್ಪಿರುವುದನ್ನು ಸಾಬೀತುಪಡಿಸುತ್ತಿವೆ ಎಂದರು.
ರಾಜ್ಯದಲ್ಲಿ ಒಂದೆಡೆ ಮತಾಂಧ ಶಕ್ತಿಗಳು ಸ್ವಚ್ಛಂದವಾಗಿ ವಿಜೃಂಭಿಸುತ್ತಿದ್ದರೆ ಇನ್ನೊಂದೆಡೆ ಕೊಲೆಗಡುಕರು ಕರ್ನಾಟಕವನ್ನು ಗೂಂಡಾ ರಾಜ್ಯವನ್ನಾಗಿಸಿದ್ದಾರೆ. ಕಾಂಗ್ರೆಸ್ ಪಕ್ಷದ ಕೈಯಲ್ಲಿ ಕರ್ನಾಟಕವು ಅಪಾಯಕಾರಿ ಸ್ಥಿತಿಯಲ್ಲಿದೆ ಎಂದು ಅವರು ತಿಳಿಸಿದರು.
ಈ ನಿಟ್ಟಿನಲ್ಲಿ ಬಿಜೆಪಿ ರಾಜ್ಯಾದ್ಯoತ ಹೋರಾಟ ನಡೆಸಲಿದೆ. ರಾಜ್ಯದ ಅಸಮರ್ಥ ಗೃಹ ಸಚಿವರು ಕೂಡಲೇ ರಾಜೀನಾಮೆ ನೀಡಬೇಕು. ಸರಕಾರ ಈ ಎಲ್ಲ ಹತ್ಯೆಗಳ ಆರೋಪಿಗಳನ್ನು ಶೀಘ್ರ ಕಾನೂನಾತ್ಮಕ ಶಿಕ್ಷೆಗೆ ಗುರಿಪಡಿಸಬೇಕು ಎಂದು ಕೆ.ಉದಯ ಕುಮಾರ್ ಶೆಟ್ಟಿ ಸರಕಾರವನ್ನು ಆಗ್ರಹಿಸಿದ್ದಾರೆ.
ಬಿಜೆಪಿ ಜಿಲ್ಲಾ ವಕ್ತಾರ ವಿಜಯಕುಮಾರ್ ಉದ್ಯಾವರ ಮತ್ತು ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು.
ಅಂಬಲಪಾಡಿ ಬಿಲ್ಲವ ಸೇವಾ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣದ ಲೋಕಾರ್ಪಣೆ
ನವ ವಿಧ ಭಕ್ತಿಗಳಲ್ಲಿ ಭಜನೆಗೆ ಬಹಳ ಪ್ರಾಮುಖ್ಯತೆ ಇದೆ. ಕಳೆದ 64 ವರ್ಷಗಳಿಂದ ವಾರದ ಭಜನೆ, ಮಂಗಲೋತ್ಸವ ಸಹಿತ ವಿವಿಧ ಧಾರ್ಮಿಕ ಆಚರಣೆಗಳ ಜೊತೆಗೆ ನಿರಂತರ ಸಮಾಜಮುಖಿ ಸೇವೆಯಲ್ಲಿ ತೊಡಗಿಸಿಕೊಂಡಿರುವ ಬಿಲ್ಲವ ಸೇವಾ ಸಂಘ(ರಿ.), ಶ್ರೀ ವಿಠೋಬ ಭಜನಾ ಮಂದಿರ, ಅಂಬಲಪಾಡಿ ಇದರ ಕಾರ್ಯವೈಖರಿ ಅನುಕರಣೀಯ. ದೇವತಾನುಗ್ರಹ ಮತ್ತು ಸಂಘಟನಾ ಶಕ್ತಿಯ ಸಮ್ಮಿಲನದಿಂದ ನಿಯೋಜಿತ ಕಾರ್ಯ ಸಾಧನೆಗಳ ಪರಿಪೂರ್ಣತೆ ಸುಲಭ ಸಾಧ್ಯ ಎಂದು ಅಂಬಲಪಾಡಿ ಶ್ರೀ ಜನಾರ್ಧನ ಮತ್ತು ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ! ನಿ.ಬೀ. ವಿಜಯ ಬಲ್ಲಾಳ್ ಹೇಳಿದರು.
ಅವರು ಅಂಬಲಪಾಡಿ ಬಿಲ್ಲವ ಸೇವಾ ಸಂಘ(ರಿ.) ಹಾಗೂ ಶ್ರೀ ವಿಠೋಬ ಭಜನಾ ಮಂದಿರದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಅಧ್ಯಕ್ಷತೆಯಲ್ಲಿ ನಡೆದ ಸಂಘದ ಶ್ರೀ ನಾರಾಯಣ ಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ವೇದಿಕೆಯ ಲೋಕಾರ್ಪಣೆಗೈದು ಆಶೀರ್ವಚನದ ಮಾತುಗಳನ್ನಾಡಿದರು.
‘ಭಜಕನು ಮಲಗಿ ಹಾಡಿದರೆ ಭಗವಂತನು ಕುಳಿತು ಕೇಳುತ್ತಾನೆ, ಕುಳಿತು ಹಾಡಿದರೆ ನಿಲ್ಲುತ್ತಾನೆ, ನಿಂತು ಹಾಡಿದರೆ ನಲಿಯುತ್ತಾನೆ, ನಲಿದು ಹಾಡಿದರೆ ಒಲಿಯುತ್ತಾನೆ’ ಎಂಬ ಭಜನೆಯ ಸಾಲುಗಳನ್ನು ವಿಶ್ಲೇಷಿಸಿದ ಧರ್ಮದರ್ಶಿಗಳು, ‘ಹೊಸ ಚಿಗುರು ಹಳೆ ಬೇರು ಕೂಡಿರಲು ಮರ ಸೊಬಗು’ ಎಂಬಂತೆ ಶ್ರೀ ವಿಠೋಬ ಭಜನಾ ಮಂದಿರದಲ್ಲಿ ಎಲ್ಲರ ಒಗ್ಗೂಡುವಿಕೆಯಿಂದ ಮಾದರಿ ಭಜನಾ ತಂಡದ ಜೊತೆಗೆ ವಿದ್ಯಾರ್ಥಿನಿಯರನ್ನೊಳಗೊಂಡ ಮಹಿಳಾ ಕುಣಿತದ ಭಜನಾ ತಂಡ ರೂಪುಗೊಂಡಿರುವುದು ಶ್ಲಾಘನೀಯ ಎಂದರು.
ದೀನ ದಲಿತೋದ್ಧಾರಕ ಬ್ರಹ್ಮಶ್ರೀ ನಾರಾಯಣ ಗುರುಗಳ ‘ಸಂಘಟನೆಯಿಂದ ಬಲಯುತಾರಾಗಿರಿ, ವಿದ್ಯಾರ್ಜನೆಯಿಂದ ಸ್ವತಂತ್ರರಾಗಿರಿ’ ಎಂಬ ದಿವ್ಯ ವಾಣಿಯ ಅನುಸಾರ ಸರಕಾರದ ಅನುದಾನ ಮತ್ತು ಸಂಘದ ಸದಸ್ಯರು ಹಾಗೂ ದಾನಿಗಳ ನೆರವಿನಿಂದ ನಿರ್ಮಾಣಗೊಂಡಿರುವ ಶ್ರೀ ನಾರಾಯಣ ಗುರು ಸಮುದಾಯ ಭವನದ 2ನೇ ಅಂತಸ್ತಿನ ಸಭಾಂಗಣ ಸಮಾಜಕ್ಕೆ ಉಪಯುಕ್ತವಾಗಲಿ. ಸಂಘದ ಮುoದಿನ ಎಲ್ಲ ಧಾರ್ಮಿಕ ಮತ್ತು ಸಾಮಾಜಿಕ ಕಳಕಳಿಯ ಕಾರ್ಯ ಯೋಜನೆಗಳು ದೇವರ ಅನುಗ್ರಹದಿಂದ ಯಶಸ್ಸನ್ನು ಕಾಣುವoತಾಗಲಿ ಎಂದು ಡಾ! ನಿ.ಬೀ. ವಿಜಯ ಬಲ್ಲಾಳ್ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಮೂರು ಮಂದಿ ಸಾಧಕರುಗಳಾದ ‘ನಿಡಂಬೂರು ಬೀಡು ಶ್ರೀ’ ಪ್ರಶಸ್ತಿ ಪುರಸ್ಕೃತ ನಿವೃತ್ತ ಮುಖ್ಯೋಪಾಧ್ಯಾಯ ಪಠೇಲರ ಮನೆ ಎ. ಜಯಕರ ಶೆಟ್ಟಿ ಅಂಬಲಪಾಡಿ ಇವರನ್ನು ‘ಶಿಕ್ಷಕ ರತ್ನ’ ಪ್ರಶಸ್ತಿಯನ್ನಿತ್ತು, ಖ್ಯಾತ ಸಾಹಿತಿ, ನಾಟಕಕಾರ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗಂಗಾಧರ್ ಕಿದಿಯೂರು ಇವರನ್ನು ‘ಸಾಹಿತ್ಯ ರತ್ನ’ ಪ್ರಶಸ್ತಿಯನ್ನಿತ್ತು, ಖ್ಯಾತ ಸಮಾಜ ಸೇವಕ, ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಗೋಪಾಲ್ ಸಿ. ಬಂಗೇರ ಪಂದುಬೆಟ್ಟು ಇವರನ್ನು ‘ಸಮಾಜ ಸೇವಾ ರತ್ನ’ ಪ್ರಶಸ್ತಿಯನ್ನಿತ್ತು ಧರ್ಮದರ್ಶಿಗಳು ಸನ್ಮಾನಿಸಿದರು.
ಸನ್ಮಾನಿತರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ, ಸಂಘವು ನಡೆದು ಬಂದ ದಾರಿ ಹಾಗೂ ಪ್ರಗತಿಯನ್ನು ಶ್ಲಾಘಿಸಿ, ಸಾಧನೆಯನ್ನು ಗುರುತಿಸಿ ಗೌರವಿಸಿದಾಗ, ಸನ್ಮಾನಿತರ ಜವಾಬ್ದಾರಿ ಹೆಚ್ಚುವ ಜೊತೆಗೆ ನಿಗದಿತ ಕ್ಷೇತ್ರದಲ್ಲಿ ಇನ್ನಷ್ಟು ಉತ್ತಮ ಸಾಧನೆಗೈಯಲು ಪ್ರೇರಣೆ ದೊರೆತಂತಾಗುತ್ತದೆ ಎಂದರು.
ಸಮಾರಂಭದ ಅಧ್ಯಕ್ಷತೆ ವಹಿಸಿದ ಸಂಘದ ಅಧ್ಯಕ್ಷ ಶಿವಕುಮಾರ್ ಅಂಬಲಪಾಡಿ ಮಾತನಾಡಿ, ಸಮಾಜದ ಹಿರಿಯರ ತ್ಯಾಗ, ದೂರದರ್ಶಿತ್ವದ ಚಿಂತನೆ ಹಾಗೂ ಸಂಘದ ಸರ್ವ ಸದಸ್ಯರ ಸಂಘಟಿತ ಶ್ರಮ ಮತ್ತು ಸಮರ್ಪಣಾಭಾವದ ಸೇವೆಯಿಂದ ಸಂಘದ ಸುವರ್ಣ ಮಹೋತ್ಸವದ ಸುಸಂದರ್ಭದಲ್ಲಿ ಹಮ್ಮಿಕೊಂಡಿದ್ದ ಸುಸಜ್ಜಿತ ಸಮುದಾಯ ಭವನ ನಿರ್ಮಾಣದ ಯೋಜನೆಯು ಸರಕಾರ ಮತ್ತು ಧಾನಿಗಳ ನೆರವಿನಿಂದ ಹಂತ ಹಂತವಾಗಿ ವೇಗ ಪಡೆದು ಸoಪೂರ್ಣಗೊಂಡಿರುವ ಸಂತೃಪ್ತಿಯ ಕ್ಷಣದಲ್ಲಿ ಸಹಕರಿಸಿದ ಎಲ್ಲರಿಗೂ ಸಂಘವು ಅಭಾರಿಯಾಗಿದೆ. ಸಂಘದ ಮುoದಿನ ಎಲ್ಲ ಕಾರ್ಯ ಯೋಜನೆಗಳ ಯಶಸ್ವಿಗೆ ಎಲ್ಲರ ಸಹಕಾರ, ಪ್ರೇರಣೆ ಅತೀ ಅಗತ್ಯ ಎಂದರು.
ಅಂಬಲಪಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಜಾತ ಯೋಗೀಶ್ ಶೆಟ್ಟಿ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ಸಂಘದ ಉಪಾಧ್ಯಕ್ಷ ಶಿವದಾಸ್ ಪಿ., ಪ್ರಧಾನ ಕಾರ್ಯದರ್ಶಿ ರಾಜೇಶ್, ಕೋಶಾಧಿಕಾರಿ ದಯಾನಂದ ಎ., ಜತೆ ಕಾರ್ಯದರ್ಶಿ ಮಹೇಂದ್ರ ಕೋಟ್ಯಾನ್, ಭಜನಾ ಸಂಚಾಲಕ ಕೆ. ಮಂಜಪ್ಪ ಸುವರ್ಣ, ಮಹಿಳಾ ಘಟಕದ ಗೌರವ ಸಂಚಾಲಕಿ ವಿಜಯಾ ಜಿ. ಬಂಗೇರ, ಸಂಚಾಲಕಿ ಗೋದಾವರಿ ಎಮ್. ಸುವರ್ಣ, ಸಹ ಸಂಚಾಲಕಿ ದೇವಕಿ ಕೆ. ಕೋಟ್ಯಾನ್, ಕಾರ್ಯದರ್ಶಿ ವಾಣಿಶ್ರೀ ಅರುಣ್, ಸಂಘದ ಆಡಳಿತ ಸಮಿತಿ ಮತ್ತು ಮಹಿಳಾ ಘಟಕದ ಪದಾಧಿಕಾರಿಗಳು, ಸಮಿತಿ ಸದಸ್ಯರು, ಸಂಘದ ಸದಸ್ಯರು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ಉಪನ್ಯಾಸಕಿ ನಳಿನಾದೇವಿ ಹಿರಿಯಡ್ಕ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.
ಸಂಘದ ಸದಸ್ಯರು, ಮಹಿಳಾ ಘಟಕ ಮತ್ತು ಸ್ಥಳೀಯ ವಿದ್ಯಾರ್ಥಿ- ವಿದ್ಯಾರ್ಥಿನಿಯರಿಂದ ವಿವಿಧ ಮನೋರಂಜನಾ ಕಾರ್ಯಕ್ರಮಗಳು ಜರಗಿತು.