ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಪರವಾಗಿ ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅವರು ಮೇ 5ರಂದು ನಡೆದ ಮಹಾ ಸಂಪರ್ಕ ಅಭಿಯಾನದಡಿ ಬೈಂದೂರು ವಿಧಾನಸಭಾ ಕ್ಷೇತ್ರದ ಶೀರೂರು ಬೂತ್ ಸಂಖ್ಯೆ 3ರ ವ್ಯಾಪ್ತಿಯಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಮನೆ ಮನೆ ಪ್ರಚಾರ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್ ಜೆ.ಬಿ., ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಜಿಲ್ಲಾ ರೈತ ಮೋರ್ಚಾ ಪ್ರಧಾನ ಕಾರ್ಯದರ್ಶಿ ಪುಷ್ಪರಾಜ್ ಶೆಟ್ಟಿ, ಶೀರೂರು ಮಹಾ ಶಕ್ತಿ ಕೇoದ್ರದ ಅಧ್ಯಕ್ಷ ಜಗನ್ನಾಥ್ ಮೊಗವೀರ, ಶೀರೂರು ಬೂತ್ ಅಧ್ಯಕ್ಷ ಅಶೋಕ್ ಶೆಟ್ಟಿ, ಹಿರಿಯ ಕಾರ್ಯಕರ್ತ ಉಮೇಶ್ ಶೇಟ್, ಪಕ್ಷದ ಪ್ರಮುಖರು, ಬೂತ್ ಸಮಿತಿ ಸದಸ್ಯರು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ಬೂತ್ ಅಧ್ಯಕ್ಷರು ಮತ್ತು ಪ್ರಮುಖರ ಸಭೆ
ಬೈಂದೂರು: ಶಿವಮೊಗ್ಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ವೈ. ರಾಘವೇಂದ್ರ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1 ಲಕ್ಷಕ್ಕೂ ಅಧಿಕ ಮತಗಳ ಲೀಡ್ ಕೊಡಿಸಲು ಬೈಂದೂರು ಶಾಸಕ ಗುರುರಾಜ್ ಗಂಟಿಹೊಳೆ ನೇತೃತ್ವದಲ್ಲಿ ವಿನೂತನ ಹಾಗೂ ಪರಿಣಾಮಕಾರಿ ಕಾರ್ಯ ಯೋಜನೆಗಳು ಪ್ರಗತಿಯಲ್ಲಿವೆ. ಈ ನಿಟ್ಟಿನಲ್ಲಿ ಪಕ್ಷದ ಕಾರ್ಯಕರ್ತರು ನಿರೀಕ್ಷಿತ ಯೋಜನೆಯನ್ನು ಸಾಕಾರಗೊಳಿಸಲು ಶ್ರಮಿಸುವ ಜೊತೆಗೆ ಸಂಘಟಿತ ಪ್ರಯತ್ನದ ಮೂಲಕ ಪಕ್ಷದ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರ ದೊಡ್ಡ ಅಂತರದ ಗೆಲುವಿಗೆ ಬದ್ಧತೆಯಿಂದ ಕೈಜೋಡಿಸಬೇಕು ಎಂದು ಬಿಜೆಪಿ ಬೈಂದೂರು ಮಂಡಲಾಧ್ಯಕ್ಷ ದೀಪಕ್ ಕುಮಾರ್ ಶೆಟ್ಟಿ ಕರೆ ನೀಡಿದರು.
ಅವರು ಬಿಜೆಪಿ ಬೈಂದೂರು ಮಂಡಲ ಕಛೇರಿಯಲ್ಲಿ ನಡೆದ ಬೈಂದೂರು ವಿಧಾನಸಭಾ ಕ್ಷೇತ್ರದ ಬೈಂದೂರು ಪಟ್ಟಣ ಪಂಚಾಯತ್ ವ್ಯಾಪ್ತಿಯ ತೆಗ್ಗರ್ಸೆ, ಬೈಂದೂರು, ಯಡ್ತರೆ ಮತ್ತು ಪಡುವರಿಯ 26 ಬೂತ್ ಗಳ ಅಧ್ಯಕ್ಷರು, ಶಕ್ತಿ ಕೇಂದ್ರಗಳ ಅಧ್ಯಕ್ಷರು, ಮಹಾ ಶಕ್ತಿ ಕೇoದ್ರದ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖರ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರದ ಸಾಧನೆಗಳು ಮತ್ತು ಬೈಂದೂರು ಕ್ಷೇತ್ರದಾದ್ಯoತ ನಡೆದ ದಾಖಲೆಯ ಅಭಿವೃದ್ಧಿ ಕೆಲಸ ಕಾರ್ಯಗಳು ಅಭ್ಯರ್ಥಿಯ ಭರ್ಜರಿ ಗೆಲುವಿಗೆ ವರದಾನವಾಗಲಿದೆ. ಎಲ್ಲ ಬೂತ್ ಗಳಲ್ಲಿ ಮೈಕ್ರೋ ಕ್ಯಾಂಪನ್ ಸಹಿತ ಮನೆ ಮನೆ ಪ್ರಚಾರಕ್ಕೆ ಹೆಚ್ಚಿನ ಒತ್ತನ್ನು ನೀಡಬೇಕು ಎಂದು ಅವರು ತಿಳಿಸಿದರು.
ಮೇ 3ರಂದು ಯಡ್ತರೆ ಜಂಕ್ಷನ್ ನಿಂದ ಬೆಳಿಗ್ಗೆ ಗಂಟೆ 10.00ಕ್ಕೆ ಹೊರಡಲಿರುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ, ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾಮಲೈ ಮತ್ತು ಬಿಜೆಪಿ ಶಿವಮೊಗ್ಗ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಬಿ.ವೈ. ರಾಘವೇಂದ್ರರವರ ಬ್ರಹತ್ ರೋಡ್ ಶೋ ಕುರಿತು ಅವರು ಮಾಹಿತಿ ನೀಡಿದರು.
ಬಿಜೆಪಿ ಬೈಂದೂರು ವಿಧಾನಸಭಾ ಕ್ಷೇತ್ರದ ಪ್ರಭಾರಿ ಅಶೋಕ್ ಮೂರ್ತಿಯವರು ಮಾತನಾಡಿ 2ನೇ ಸುತ್ತಿನ ಮನೆ ಮನೆ ಪ್ರಚಾರ ಹಾಗೂ ಇನ್ನಿತರ ಪ್ರಮುಖ ವಿಚಾರಗಳ ಬಗ್ಗೆ ವಿಸ್ತೃತ ಮಾಹಿತಿ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಕಾರ್ಯದರ್ಶಿ ರಾಘವೇಂದ್ರ ಕುಂದರ್, ಜಿಲ್ಲಾ ಕಾರ್ಯಾಲಯ ಕಾರ್ಯದರ್ಶಿ ಶಿವಕುಮಾರ್ ಅಂಬಲಪಾಡಿ, ಮಹಾ ಶಕ್ತಿ ಕೇಂದ್ರದ ಪ್ರಭಾರಿ ಸುರೇಶ್ ಬಟ್ವಾಡಿ, ಮಹಾ ಶಕ್ತಿ ಕೇoದ್ರದ ಅಧ್ಯಕ್ಷ ಗೋಪಾಲಕೃಷ್ಣ ಕಲ್ಮಕ್ಕಿ, ಶಕ್ತಿ ಕೇoದ್ರಗಳ ಅಧ್ಯಕ್ಷರುಗಳಾದ ಸಂಜೀವ ಮೊಗವೀರ, ನಾರಾಯಣ ದೇವಾಡಿಗ, ಕೃಷ್ಣ ದೇವಾಡಿಗ, ಸುಕೇಶ್ ಪೂಜಾರಿ, ದಿವಾಕರ್ ಶೆಟ್ಟಿ ನೆಲ್ಯಾಡಿ, ವಿಠಲ್ ಶೆಟ್ಟಿ, ಬೂತ್ ಅಧ್ಯಕ್ಷರು ಮತ್ತು ಪಕ್ಷದ ಪ್ರಮುಖರು ಉಪಸ್ಥಿತರಿದ್ದರು.
ಉಡುಪಿ: ಗ್ಯಾರಂಟಿ ಹೆಸರಿನಲ್ಲಿ ಜಾಹೀರಾತು ನೀಡಿ ಬಿಟ್ಟಿ ಪ್ರಚಾರ ಪಡೆಯಲು ವಿಫಲ ಯತ್ನ ನಡೆಸುತ್ತಿರುವ ಕಾಂಗ್ರೆಸ್ ರಾಜ್ಯದ ಅಭಿವೃದ್ಧಿಗೆ ತಿಲಾಂಜಲಿಯನ್ನಿತ್ತು ರಾಜ್ಯವನ್ನು ದಿವಾಳಿಯ ಅಂಚಿಗೆ ನೂಕಿದೆ. ಜನರ ತೆರಿಗೆ ಹಣದಲ್ಲಿ ಗ್ಯಾರಂಟಿಗಳನ್ನು ಘೋಷಿಸಿ ರಾಜ್ಯದ ಅಭಿವೃದ್ಧಿಗೆ ಚಿಕ್ಕಾಸನ್ನೂ ನೀಡದ ರಾಜ್ಯ ಕಾಂಗ್ರೆಸ್ ಸರಕಾರ ಬೊಕ್ಕಸವನ್ನು ಬರಿದಾಗಿಸಿ ಕೇoದ್ರ ಸರಕಾರದ ಮೇಲೆ ಸುಳ್ಳು ಆರೋಪಗಳನ್ನು ಹೊರಿಸುತ್ತಾ ಚೆoಬು ಹಿಡಿದು ಹೆಚ್ಚುವರಿ ಅನುದಾನವನ್ನು ಯಾಚಿಸುತ್ತಿರುವುದು ವಿಶಾಧನೀಯ. ಕಾಂಗ್ರೆಸ್ ಸರಕಾರ ಗ್ಯಾರಂಟಿಗಳ ಜೊತೆಗೆ ರಾಜ್ಯದ ಅಭಿವೃದ್ಧಿಗೆ ಬಿಡುಗಡೆ ಮಾಡಿರುವ ಅನುದಾನದ ವಿವರವನ್ನೂ ನೀಡಲಿ. ಈ ನಿಟ್ಟಿನಲ್ಲಿ ದೇಶದ ಭದ್ರತೆ, ಅಭಿವೃದ್ಧಿ ಹಾಗೂ ಆರ್ಥಿಕತೆ ಸದೃಢಗೊಳಿಸಲು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸಿ ಬೆಂಬಲಿಸಲು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಮನವಿ ಮಾಡಿದರು.
ಅವರು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರ ಪರ ಏ.24ರಂದು ಉಡುಪಿ ನಗರದಾದ್ಯoತ ನಡೆದ ಬಿರುಸಿನ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿ ಮತದಾರರನ್ನು ಉದ್ದೇಶಿಸಿ ಮಾತನಾಡಿದರು.
‘ಮೂರು ತಲೆ ಮಾರಿಗೆ ಆಗುವಷ್ಟು ಕೂಡಿಟ್ಟಿದ್ದೇವೆ’ ಎಂದು ಹೇಳಿಕೆ ನೀಡಿದ್ದ ಕಾಂಗ್ರೆಸ್ ಹಿರಿಯ ನಾಯಕ ರಮೇಶ್ ಕುಮಾರ್ ಪ್ರಧಾನಿ ನರೇಂದ್ರ ಮೋದಿಯವರನ್ನು ಶನಿ ಎಂದು ಕರೆದಿದ್ದಾರೆ. ಭ್ರಷ್ಟಾಚಾರಿಗಳ ಪಾಲಿಗೆ ಮೋದಿ ಶನಿಯಾಗಿಯೇ ಕಾಡುವುದು ಸಹಜ. ಇದು ಕಾಂಗ್ರೆಸ್ಸಿಗೆ ಸೋಲಿನ ಭಯ ಯಾವ ಮಟ್ಟದಲ್ಲಿದೆ ಎಂಬದನ್ನು ಬಿಂಬಿಸುತ್ತದೆ ಎಂದು ಅವರು ತಿಳಿಸಿದರು.
‘ಬಿಜೆಪಿಗರು ಪ್ರಧಾನಿ ಮೋದಿ ಹೆಸರಲ್ಲಿ ಮತ ಯಾಚಿಸುತ್ತಾರೆ’ ಎಂದಿರುವ ಕಾಂಗ್ರೆಸ್ ಅಭ್ಯರ್ಥಿ ಕೂಡ ಸ್ವಯಂ ತಮ್ಮ ನಾಯಕ ರಾಹುಲ್ ಗಾಂಧಿ ಹೆಸರಲ್ಲೇ ಮತ ಯಾಚಿಸುವುದು ಉತ್ತಮ. ಪ್ರಧಾನಿ ನರೇಂದ್ರ ಮೋದಿಯವರು ಮಂಗಳೂರಿಗೆ ಆಗಮಿಸಿ ನಡೆಸಿದ ರೋಡ್ ಶೋ ಕಾರ್ಯಕರ್ತರು ಮತ್ತು ಮತದಾರರಲ್ಲಿ ಹೊಸ ಸಂಚಲನ ಮೂಡಿಸಿ ಮತಗಳ ಪ್ರಮಾಣ ಹೆಚ್ಚಳಕ್ಕೆ ನಾಂದಿ ಹಾಡಿದೆ. ಕಾರ್ಯಕರ್ತರ ಹುಮ್ಮಸ್ಸಿನ ಮನೆ ಮನೆ ಪ್ರಚಾರದ ಜೊತೆಗೆ ರಾಜ್ಯ, ಅಂತರ್ ರಾಜ್ಯ ಮತ್ತು ರಾಷ್ಟ್ರೀಯ ನಾಯಕರ ರೋಡ್ ಶೋ, ಸಮಾವೇಶಗಳು ಮತದಾರರಲ್ಲಿ ಪ್ರೇರಣೆ ತುಂಬಿವೆ ಎಂದರು.
ಸಂಘಟಿತ ಪರಿಶ್ರಮದ ಫಲವಾಗಿ ಏ.26ರಂದು ನಡೆಯುವ ಲೋಕಸಭಾ ಚುನಾವಣೆಯಲ್ಲಿ ಮತದಾರರು ಗರಿಷ್ಠ ಪ್ರಮಾಣದಲ್ಲಿ ಬಿಜೆಪಿ ಪರ ಮತ ಚಲಾಯಿಸುವ ಮೂಲಕ ಜೂನ್ 4ರಂದು ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಅತ್ಯಂತ ಹೆಚ್ಚಿನ ಬಹುಮತದಿಂದ ಗೆಲ್ಲುವ ಪೂರ್ಣ ವಿಶ್ವಾಸವಿದೆ. ಈ ಹಿನ್ನೆಲೆಯಲ್ಲಿ ದೇಶವನ್ನು ಪ್ರಗತಿಯ ಪಥದಲ್ಲಿ ಮುನ್ನಡೆಸಲು ನರೇಂದ್ರ ಮೋದಿಯವರನ್ನು ಮತ್ತೊಮ್ಮೆ ಪ್ರಧಾನಿಯನ್ನಾಗಿಸುವ ಮಹತ್ಕಾರ್ಯಕ್ಕೆ ಜನತೆ ಸರಳ ಸಜ್ಜನಿಕೆಯ ಅನುಭವಿ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ದೊಡ್ಡ ಅಂತರದ ಮತಗಳಿಂದ ವಿಜಯಶಾಲಿಯನ್ನಾಗಿಸಬೇಕು ಎಂದು ಕಿಶೋರ್ ಕುಮಾರ್ ಕುಂದಾಪುರ ಮನವಿ ಮಾಡಿದರು.
*ದೇಶವನ್ನು ವಿಶ್ವದ 3ನೇ ಅತಿ ದೊಡ್ಡ ಆರ್ಥಿಕತೆ ಮಾಡಲು ಪಣತೊಟ್ಟಿರುವ ಮೋದಿ ಬೆಂಬಲಿಸಲು ಬಿಜೆಪಿ ಗೆಲ್ಲಿಸಿ : ಕೋಟ ಶ್ರೀನಿವಾಸ ಪೂಜಾರಿ*
ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ 10 ವರ್ಷಗಳಲ್ಲಿ ನೂರಾರು ಜನಪರ ಯೋಜನೆಗಳ ಸಹಿತ 40 ಕೋಟಿ ಜನತೆಯನ್ನು ಬಡತನದ ರೇಖೆಯಿಂದ ಮೇಲೆತ್ತುವ ಜೊತೆಗೆ 70 ಕೋಟಿ ಜನತೆ ಬ್ಯಾoಕ್ ಖಾತೆಗಳನ್ನು ತೆರೆಯುವ ಮೂಲಕ ಕೇoದ್ರ ಸರಕಾರದ ಯೋಜನೆಗಳ ಫಲಗಳನ್ನು ಬ್ಯಾಂಕ್ ಖಾತೆಗಳಿಗೆ ನೇರ ವರ್ಗಾವಣೆಗೆ ಮಾಡುವ ಕ್ರಾಂತಿಕಾರಿ ಬದಲಾವಣೆಯಿಂದ ಭ್ರಷ್ಟಾಚಾರಕ್ಕೆ ಕಡಿವಾಣ ಹಾಕಿದಂತಾಗಿದೆ. ಭಾರತವನ್ನು ವಿಶ್ವದ ಮುಂದುವರಿದ ದೇಶಗಳ ಯಾದಿಯಲ್ಲಿ 5ನೇ ಸ್ಥಾನಕ್ಕೆ ಕೊಂಡೊಯ್ದಿರುವ ಪ್ರಧಾನಿ ನರೇಂದ್ರ ಮೋದಿ ಮುoದಿನ 5 ವರ್ಷಗಳಲ್ಲಿ ಭಾರತವನ್ನು ವಿಶ್ವದ 3ನೇ ಅತಿ ದೊಡ್ಡ ಆರ್ಥಿಕತೆಯನ್ನಾಗಿ ಮಾಡುವ ದಿಕ್ಕಿನಲ್ಲಿ ಶ್ರಮಿಸಲಿದ್ದಾರೆ ಎಂದು ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ರಾಜಕೀಯ ಜೀವನದಲ್ಲಿ ಜನಸಾಮಾನ್ಯರ ಕಷ್ಟ ಕಾರ್ಪಣ್ಯಗಳಿಗೆ ಸ್ಪಂದಿಸುವ ಜೊತೆಗೆ ಗ್ರಾಮ ಪಂಚಾಯತ್ ಮಟ್ಟದಿಂದ ವಿಧಾನ ಪರಿಷತ್ ವಿಪಕ್ಷ ನಾಯಕ ಹಾಗೂ ಸಚಿವನಾಗಿ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ಪ್ರಾಮಾಣಿಕವಾಗಿ ಬ್ರಷ್ಟಾಚಾರ ರಹಿತವಾಗಿ ನಿರ್ವಹಿಸಿದ ಹಿನ್ನೆಲೆಯಲ್ಲಿ ಪ್ರಸಕ್ತ ಲೋಕ ಸಭಾ ಚುನಾವಣೆಯಲ್ಲಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿಸುವ ನಿಟ್ಟಿನಲ್ಲಿ ಹಾಗೂ ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಗಾಗಿ ಅತ್ಯಧಿಕ ಮತಗಳ ಅಂತರದಿಂದ ನನ್ನನ್ನು ಗೆಲ್ಲಿಸಿ ಆಶೀರ್ವದಿಸಬೇಕು ಎಂದು ಕೋಟ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಎ. ಸುವರ್ಣ, ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ, ಮಾಜಿ ಜಿಲ್ಲಾಧ್ಯಕ್ಷರುಗಳಾದ ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಟ್ಟಾರ್ ರತ್ನಾಕರ ಹೆಗ್ಡೆ, ಕುಯಿಲಾಡಿ ಸುರೇಶ್ ನಾಯಕ್, ಚುನಾವಣಾ ಅಭಿಯಾನ ಪ್ರಮುಖ್ ಬೈಕಾಡಿ ಸುಪ್ರಸಾದ್ ಶೆಟ್ಟಿ, ಬಿಜೆಪಿ ಎಸ್.ಸಿ. ಮೋರ್ಚಾ ರಾಜ್ಯ ಉಪಾಧ್ಯಕ್ಷ ದಿನಕರ ಬಾಬು ಹಾಗೂ ಪಕ್ಷದ ಮುಖಂಡರು, ಜಿಲ್ಲಾ, ಮೋರ್ಚಾ, ಪ್ರಕೋಷ್ಠ ಸಹಿತ ವಿವಿಧ ಸ್ತರದ ಪದಾಧಿಕಾರಿಗಳು, ಜನ ಪ್ರತಿನಿಧಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.
ಉಡುಪಿ: ಕರಾವಳಿ ಜಿಲ್ಲೆಗಳ ಆರ್ಥಿಕತೆಗೆ ಬಹುದೊಡ್ಡ ಕೊಡುಗೆ ನೀಡುತ್ತಿರುವ ಮೀನುಗಾರಿಕೆಗೆ ಶಕ್ತಿ ತುಂಬುವ ನಿಟ್ಟಿನಲ್ಲಿ ಸಮಸ್ತ ಮೀನುಗಾರರ ಬೇಡಿಕೆ ಸಮಸ್ಯೆಗಳ ಬಗ್ಗೆ ಧ್ವನಿಯಾಗಿ ಕೇಂದ್ರ ಸರ್ಕಾರದ ಮೂಲಕ ಪರಿಹಾರ ಕಲ್ಪಿಸಲು ಪ್ರಾಮಾಣಿಕ ಪ್ರಯತ್ನ ಮಾಡುವುದಾಗಿ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಮಲ್ಪೆ ಮೀನುಗಾರ ಸಂಘದ ಸಭಾಭವನದಲ್ಲಿ ಮಲ್ಪೆಯ ಮೀನುಗಾರ ಮುಖಂಡರು ಹಾಗೂ ಸಂಘದ ಪದಾಧಿಕಾರಿಗಳನ್ನು ಭೇಟಿ ನೀಡಿ ಮತಯಾಚನೆ ಮಾಡಿ ಗೆಲುವಿಗೆ ಸಹಕಾರ ಕೋರಿದರು.
ಕರಾವಳಿ ಭಾಗದ ಮೀನುಗಾರರು ನಿರಂತರವಾಗಿ ರಾಷ್ಟ್ರೀಯತೆ, ಹಿಂದುತ್ವ ಹಾಗೂ ದೇಶದ ಸಮಗ್ರ ಅಭಿವೃದ್ಧಿಗಾಗಿ ಸದಾ ಬಿಜೆಪಿ ಪಕ್ಷವನ್ನು ಬೆಂಬಲಿಸುತ್ತಾ ಬಂದಿದ್ದು, ಈ ಬಾರಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸತತ 3ನೇ ಬಾರಿಗೆ ಪ್ರಧಾನಿಯಾಗಿಸುವ ಸಂಕಲ್ಪ ಮಾಡಿದ್ದಾರೆ.
ಈ ಹಿಂದೆ ಮೀನುಗಾರಿಕಾ ಸಚಿವರಾಗಿದ್ದ ಅವಧಿಯಲ್ಲಿ 60 ಕೋಟಿ ರೂ. ವೆಚ್ಚದಲ್ಲಿ ಸುಮಾರು 22 ಸಾವಿರ ಮಹಿಳಾ ಮೀನುಗಾರರ ಸಾಲ ಮನ್ನಾ, ಹಲವು ದಶಕಗಳ ಬೇಡಿಕೆಯಾಗಿದ್ದ ಹೆಜಮಾಡಿ ಮೀನುಗಾರಿಕೆ ಬಂದರು ಅಭಿವೃದ್ಧಿಗೆ 180 ಕೋಟಿ ರೂ. ಮಂಜೂರು ಹಾಗೂ ವಿವಿಧ ಮೀನುಗಾರಿಕಾ ಬಂದರುಗಳ ಅಭಿವೃದ್ಧಿಗೆ ಆದ್ಯತೆ ನೀಡಿದ್ದೇನೆ ಎಂದರು.
ಸಭೆಯಲ್ಲಿ ಉಪಸ್ಥಿತರಿದ್ದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಮಾತನಾಡಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಪ್ರಧಾನಮಂತ್ರಿ ಮತ್ಸ್ಯ ಸಂಪದ ಯೋಜನೆಯ ಮೂಲಕ ಮೀನುಗಾರಿಕೆ ಅಭಿವೃದ್ಧಿಗೆ 26 ಸಾವಿರ ಕೋಟಿ ಅನುದಾನ ಒದಗಿಸಿದ್ದು, ಸಾಗರಮಾಲ ಯೋಜನೆಯ ಮೂಲಕ ಬಂದರುಗಳ ಅಭಿವೃದ್ದಿ, ಕರಾವಳಿ ಜಿಲ್ಲೆಯ ಉತ್ಪನ್ನವಾಗಿ ಸಾಗರೋತ್ಪನ್ನ ವನ್ನಾಗಿ ಆಯ್ಕೆ ಮಾಡಿದ್ದು, ಮೀನುಗಾರಿಕೆಗೆ ಪ್ರತ್ಯೇಕ ಸಚಿವಾಲಯ ಸ್ಥಾಪನೆ ಮಾಡುವ ಮೂಲಕ ಮೀನುಗಾರರ ಬಗ್ಗೆ ತನ್ನ ಬದ್ಧತೆಯನ್ನು ನಿರೂಪಿಸಿದೆ ಎಂದರು.
ಕೇಂದ್ರ ಸರ್ಕಾರ ಮೀನುಗಾರಿಕೆಯ ಸಮಗ್ರ ಅಭಿವೃದ್ಧಿಯ ಜೊತೆ ಜೊತೆಗೆ ಮೀನುಗಾರರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳ ಅನುಷ್ಠಾನಕ್ಕೆ ಮೋದಿ ಸರಕಾರ ಬದ್ಧವಾಗಿದ್ದು, ಈ ಬಾರಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸುವ ಮೂಲಕ ನರೇಂದ್ರ ಮೋದಿಗೆ ಶಕ್ತಿ ತುಂಬುವಂತೆ ಕರೆ ನೀಡಿದರು.
ಸಭೆಯಲ್ಲಿ ಮಲ್ಪೆ ಮೀನುಗಾರರ ಸಂಘದ ಅಧ್ಯಕ್ಷ ದಯಾನಂದ ಸುವರ್ಣ ಹಾಗೂ ಮೀನುಗಾರ ಸಂಘಟನೆಗಳ ಪದಾಧಿಕಾರಿಗಳು, ಮೀನುಗಾರ ಮುಖಂಡರು ಉಪಸ್ಥಿತರಿದ್ದರು.
ಮೀನುಗಾರರಿಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಭರವಸೆ ಉಳಿದಿಲ್ಲ.
ಕರಾವಳಿ ಮೀನುಗಾರರಿಗೆ ಕಾಂಗ್ರೆಸ್ ಪಕ್ಷದಿಂದ ಯಾವುದೇ ಭರವಸೆ ಉಳಿದಿಲ್ಲ. 2018ರ ಸುವರ್ಣ ತ್ರಿಭುಜ ಬೋಟ್ ದುರಂತ ಸಂದರ್ಭದಲ್ಲಿ ರಾಜ್ಯದಲ್ಲಿ ಅಧಿಕಾರದಲ್ಲಿದ್ದ ಕಾಂಗ್ರೆಸ್ ಸರಕಾರ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸದೇ ಯಾವುದೇ ಪರಿಹಾರ ನೀಡದೇ ಅನ್ಯಾಯವೆಸಗಿದೆ. ಮುಂದೆ ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರ್ಕಾರ ವಿಶೇಷ ಪ್ರಕರಣದಡಿ ಸಂತ್ರಸ್ತ ಮೀನುಗಾರರ ಕುಟುಂಬಕ್ಕೆ ಪರಿಹಾರ ನೀಡಿ ಆರ್ಥಿಕ ಸ್ಥೈರ್ಯ ತುಂಬಿದೆ ಎಂದು ಬಿಜೆಪಿ ಮೀನುಗಾರ ಪ್ರಕೋಷ್ಟ ಪ್ರಕೋಷ್ಠದ ಜಿಲ್ಲಾ ಸಂಚಾಲಕ ರವಿರಾಜ್ ಸುವರ್ಣ ತಿಳಿಸಿದ್ದಾರೆ.
ಕಳೆದ ವರ್ಷ ಉಚ್ಚಿಲದಲ್ಲಿ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ನಡೆಸಿದ ಮೀನುಗಾರರ ಸಂವಾದದಲ್ಲಿ ನೀಡಿದ ಯಾವುದೇ ಭರವಸೆಗಳನ್ನು ರಾಜ್ಯದ ಕಾಂಗ್ರೆಸ್ ಸರ್ಕಾರ ಈಡೇರಿಸದೇ ನಿರಂತರವಾಗಿ ಮೀನುಗಾರರಿಗೆ ಚೊಂಬು ನೀಡಿ ಮೋಸ ಮಾಡಿದೆ ಎಂದು ರವಿರಾಜ್ ಸುವರ್ಣ ತಿಳಿಸಿದ್ದಾರೆ.
ಉಡುಪಿ:ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ಆಹಾರ ಭದ್ರತಾ ಕಾಯ್ದೆಯಡಿ ದೇಶದ 80 ಕೋಟಿ ಜನತೆಗೆ 5 ಕೆ.ಜಿ.ಯಂತೆ ಉಚಿತ ಅಕ್ಕಿಯನ್ನು ವಿತರಿಸುತ್ತಾ ಬಂದಿದೆ. ಆ ಮೂಲಕ ಮೋದಿ ಅಕ್ಷಯ ಪಾತ್ರೆಯಿಂದ ಜನತೆಗೆ ಉಚಿತ ಅಕ್ಕಿ ದೊರೆತಂತಾಗಿದೆ. ಆದರೆ ಚುನಾವಣೆಯ ಸಂದರ್ಭದಲ್ಲಿ 10 ಕೆ.ಜಿ. ಉಚಿತ ‘ಅಕ್ಕಿ ಬೇಕೋ ಬೇಡ್ವೊ’ ಎಂದು ಪುಂಗಿ ಊದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರಕಾರ ಒಂದು ಕಾಳು ಅಕ್ಕಿಯನ್ನೂ ನೀಡದೆ ಜನತೆಗೆ ಖಾಲಿ ಚೊಂಬು ನೀಡಿ ದ್ರೋಹವೆಸಗಿದೆ ಎಂದು ಉಡುಪಿ ಶಾಸಕ ಯಶ್ಪಾಲ್ ಸುವರ್ಣ ತಿಳಿಸಿದ್ದಾರೆ.
ಅವರು ಬಿಜೆಪಿ ಜಿಲ್ಲಾ ಕಛೇರಿಯಲ್ಲಿ ನಡೆದ ಉಡುಪಿ ನಗರ ಚುನಾವಣಾ ನಿರ್ವಹಣಾ ಸಮಿತಿಯ ಪ್ರಗತಿ ಪರಿಶೀಲನಾ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಗ್ರಾಮ ಪಂಚಾಯತ್ ಮಟ್ಟದಿಂದ ರಾಜ್ಯ ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಸ್ಥಾನದವರೆಗೆ ಬೆಳೆದು ಬಂದ ಸನ್ನಿವೇಶದಲ್ಲಿ ಸಚಿವರಾಗಿ ಮುಜರಾಯಿ, ಮೀನುಗಾರಿಕೆ, ಬಂದರು, ಒಲನಾಡ ಜಲ ಸಾರಿಗೆ, ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗಳಲ್ಲಿ ಮಾಡಿರುವ ಜನಪರ ಕಾರ್ಯಗಳ ಸಾಧನೆ ಮತ್ತು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇoದ್ರ ಸರಕಾರದ ಐತಿಹಾಸಿಕ ಸಾಧನೆಗಳನ್ನು ಜನತೆಯ ಮುಂದಿಟ್ಟು ಮತ ಕೇಳಿದರೆ, ಕಾಂಗ್ರೆಸ್ ಅಭ್ಯರ್ಥಿ ಬಿಜೆಪಿ ಸರಕಾರದ ಅವಧಿಯ ಸಾಧನೆಗಳನ್ನೇ ತನ್ನ ಸಾಧನೆ ಎಂಬಂತೆ ಬಿಂಬಿಸುತ್ತಾ, ಬಿಜೆಪಿ ಅಭ್ಯರ್ಥಿಯ ತೇಜೋವಧೆಗೈಯುತ್ತಾ ಬಿಟ್ಟಿ ಪ್ರಚಾರ ಪಡೆಯಲು ವಿಫಲ ಯತ್ನ ನಡೆಸುತ್ತಿರುವುದು ಶೋಚನೀಯ ಎಂದು ಅವರು ತಿಳಿಸಿದರು.
ಸಾಮಾನ್ಯ ಬಡ ಕುಟುಂಬದ ಹಿನ್ನೆಲೆಯಿಂದ ಬಂದಿರುವ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಬಡ ಹಾಗೂ ಶೋಷಿತ ವರ್ಗದ ಕಷ್ಟ ಕಾರ್ಪಣ್ಯಗಳನ್ನು ಚೆನ್ನಾಗಿಯೇ ಅರಿತಿದ್ದಾರೆ. ಸಚಿವರಾಗಿದ್ದ ಸಂದರ್ಭದಲ್ಲಿ ಎಸ್.ಸಿ., ಎಸ್.ಟಿ. ಸಮುದಾಯ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣಕ್ಕಾಗಿ ಕೈಗೊಂಡ ಅನೇಕ ಅಭಿವೃದ್ಧಿ ಕೆಲಸ ಕಾರ್ಯಗಳು ಜನ ಮೆಚ್ಚುಗೆಗೆ ಪಾತ್ರವಾಗಿವೆ. ಮುಜರಾಯಿ ಇಲಾಖೆಯ ಮೂಲಕ ಅನೇಕ ದೇವಸ್ಥಾನ, ದೈವಸ್ಥಾನ, ಭಜನಾ ಮಂದಿರ, ಗರೋಡಿಗಳ ಸಮಗ್ರ ಅಭಿವೃದ್ಧಿಗೆ ಅನುದಾನ ನೀಡಿರುವುದು, ಮೀನುಗಾರಿಕಾ ಇಲಾಖೆಯ ಮೂಲಕ ಮೀನುಗಾರಿಕೆ ಮತ್ತು ಬಂದರು ಅಭಿವೃದ್ಧಿಗೆ ಕೈಗೊಂಡಿರುವ ಕ್ರಮಗಳು ಪ್ರಶಂಸೆಗೆ ಪಾತ್ರವಾಗಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗೆ ಕೋಟ ಶ್ರೀನಿವಾಸ ಪೂಜಾರಿಯವರ ಕಾರ್ಯ ವೈಖರಿ ಮತ್ತು ಸಾಧನೆಗಳ ಬಗ್ಗೆ ಮಾತನಾಡುವ ಯಾವುದೇ ನೈತಿಕತೆ ಇಲ್ಲ. ಸಾಮಾನ್ಯ ಜನರೊಂದಿಗೂ ಬೆರೆತು ಎಲ್ಲರನ್ನೂ ಸಮಭಾವದಲ್ಲಿ ಕಾಣುವ ಮಾದರಿ ಜನ ನಾಯಕ ಕೋಟ ದಾಖಲೆಯ ಅಂತರದ ಮತಗಳಿಂದ ವಿಜಯಶಾಲಿಯಾಗುವುದು ಶತಸಿದ್ಧ ಎಂದು ಯಶ್ಪಾಲ್ ಸುವರ್ಣ ಹೇಳಿದರು.
ಏ.23 ಮಂಗಳವಾರ ಸಂಜೆ ಗಂಟೆ 4.00ಕ್ಕೆ ಬ್ರಹ್ಮಾವರ ಆಕಾಶವಾಣಿ ಕೇಂದ್ರದ ಬಳಿಯಿಂದ ಬ್ರಹ್ಮಾವರ ಬಸ್ ನಿಲ್ದಾಣದ ವರೆಗೆ ತಮಿಳುನಾಡು ಬಿಜೆಪಿ ರಾಜ್ಯಾಧ್ಯಕ್ಷ ಅಣ್ಣಾ ಮಲೈಯವರ ಬ್ರಹತ್ ರೋಡ್ ಶೋ ಜರಗಲಿದೆ. ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು ಮತ್ತು ಪಕ್ಷದ ಮುಖಂಡರು ಭಾಗವಹಿಸಲಿದ್ದಾರೆ. ಪಕ್ಷದ ಕಾರ್ಯಕರ್ತರು ಮತ್ತು ಮತದಾರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಉಪಸ್ಥಿತರಿರುವಂತೆ ಶಾಸಕ ಯಶ್ಪಾಲ್ ಸುವರ್ಣ ಕೋರಿದ್ದಾರೆ.
ಪ್ರಜಾಪ್ರಭುತ್ವದ ಆಶಯ ರಾಮ ರಾಜ್ಯ. ರಾಮ ರಾಜ್ಯ ಸಾಕಾರಗೊಳ್ಳಬೇಕಾದರೆ ಧರ್ಮಾಧಾರಿತ, ಸಾಂಸ್ಕೃತಿಕ, ವಿಕಸಿತ ಭಾರತ ನಿರ್ಮಾಣಗೊಳ್ಳಬೇಕು. ಅದಕ್ಕಾಗಿ ಈ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬೆಂಬಲಿಸಬೇಕು ಎಂದು ಚುನಾವಣಾ ಅಭಿಯಾನ ಪ್ರಮುಖ್ ಬೈಕಾಡಿ ಸುಪ್ರಸಾದ್ ಶೆಟ್ಟಿ ಮನವಿ ಮಾಡಿದರು.
ಬಡವರ ಸೇವೆ, ಮಹಿಳಾ ಸಬಲೀಕರಣ, ಸ್ತ್ರೀ ರಕ್ಷಣೆ, ಕೆಳ ಹಾಗೂ ಮಧ್ಯಮ ವರ್ಗದ ಕಾಳಜಿ, ರೈತರ ಕಲ್ಯಾಣ, ಶ್ರಮಿಕ ವರ್ಗದ ಶ್ರೇಯೋಭಿವೃದ್ಧಿ ಮುಂತಾದ ದೂರದರ್ಶಿತ್ವದ ಚಿಂತನೆಯ ಅಭಿವೃದ್ಧಿಯೇ ಬಿಜೆಪಿಯ ಮೂಲ ಉದ್ದೇಶವಾಗಿದ್ದು ಕಳೆದ 10 ವರ್ಷಗಳಲ್ಲಿ ‘ಸಬ್ ಕಾ ಸಾಥ್ ಸಬ್ ಕಾ ವಿಕಾಸ್’ ತತ್ವದಡಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಭಾರತ ಅಭಿವೃದ್ಧಿಯ ಹೊಸ ಶಕೆಯೊಂದಿಗೆ ದಾಖಲೆಯ ಸಾಧನೆಗಳೊಂದಿಗೆ ವಿಶ್ವದ ಮುಂದುವರಿದ ದೇಶಗಳಲ್ಲಿ 5ನೇ ಸ್ಥಾನವನ್ನು ಅಲಂಕರಿಸಿದೆ. ವಿಕಸಿತ ಭಾರತ, ಸದೃಢ ಭಾರತ, ಸಮೃದ್ಧ ಭಾರತ ಪರಿಕಲ್ಪನೆಯೊಂದಿಗೆ ಭಾರತವನ್ನು ವಿಶ್ವದ ಮುಂದುವರಿದ ರಾಷ್ಟ್ರಗಳಲ್ಲಿ 3ನೇ ಸ್ಥಾನಕ್ಕೇರಿಸಲು ಶ್ರಮಿಸುತ್ತಿರುವ ಪ್ರಧಾನಿ ನರೇಂದ್ರ ಮೋದಿಯನ್ನು 3ನೇ ಬಾರಿಗೆ ಪ್ರಧಾನಿಯನ್ನಾಗಿಸಲು ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸಬೇಕು ಎಂದು ಅವರು ಮನವಿ ಮಾಡಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ ಮಾತನಾಡಿ ಪರಿಣಾಮಕಾರಿ ಮನೆ ಮನೆ ಪ್ರಚಾರದೊಂದಿಗೆ ಪ್ರತೀ ಬೂತ್ ಗಳನ್ನು ದೊಡ್ಡ ಅಂತರ ಮತಗಳಿಂದ ಗೆಲ್ಲುವ ಮೂಲಕ ಸಂಘಟಿತ ಪ್ರಯತ್ನದಿಂದ ಪಕ್ಷದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ದೊಡ್ಡ ಅಂತರದ ಮತಗಳಿಂದ ಗೆಲ್ಲಿಸಲು ಎಲ್ಲರೂ ಬದ್ಧತೆಯಿಂದ ಶ್ರಮಿಸಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿರಣ್ ಕುಮಾರ್ ಬೈಲೂರು, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ ವಿಧಾನಸಭಾ ಕ್ಷೇತ್ರ ಚುನಾವಣಾ ಸಂಚಾಲಕ ಗಿರೀಶ್ ಎಮ್. ಅಂಚನ್, ಉಡುಪಿ ನಗರಾಧ್ಯಕ್ಷ ದಿನೇಶ್ ಅಮೀನ್, ಪ್ರಧಾನ ಕಾರ್ಯದರ್ಶಿಗಳಾದ ಜಗದೀಶ್ ಆಚಾರ್ಯ ಕಪ್ಪೆಟ್ಟು, ರಶ್ಮಿತಾ ಬಿ. ಶೆಟ್ಟಿ, ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ಪೃಥ್ವಿರಾಜ್ ಶೆಟ್ಟಿ ಉಪಸ್ಥಿತರಿದ್ದರು.
ಉಡುಪಿ-ಚಿಕ್ಕಮಗಳೂರು: ದೇಶದಲ್ಲಿ ಕೋಟ ಶ್ರೀನಿವಾಸ ಪೂಜಾರಿ ಓರ್ವ ಆದರ್ಶ ಮತ್ತು ಪ್ರಾಮಾಣಿಕ ರಾಜಕಾರಣಿ. ಕೋಟರವರನ್ನು ಕನಿಷ್ಠ 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ ಎಂದು ನೆರೆದ ಜನಸ್ತೋಮದಲ್ಲಿ ಮಾಜಿ ಪ್ರಧಾನಿ ದೇವೇಗೌಡ ಅವರು ಮನವಿ ಮಾಡಿದರು.
ಅವರು ಮೂಡಿಗೆರೆ ಅಡ್ಯoತಾಯ ರಂಗ ಮಂದಿರದಲ್ಲಿ ನಡೆದ ಬಿಜೆಪಿ ಜೆಡಿಎಸ್ ಕಾರ್ಯಕರ್ತರ ಜಂಟಿ ಸಮಾವೇಶವನ್ನು ಉದ್ದೇಶಿಸಿ ಮಾತನಾಡಿದರು.
ಭಾರತ ದೇಶದಲ್ಲಿ ನರೇಂದ್ರ ಮೋದಿಯವರನ್ನು ಸರಿಗಟ್ಟುವ ಮತ್ತೊಬ್ಬ ರಾಜಕಾರಣಿ ನನಗಂತೂ ಕಂಡು ಬರುತ್ತಿಲ್ಲ. ನನಗೆ ಜೀವನದಲ್ಲಿ ಪ್ರಧಾನ ಮಂತ್ರಿಯಾಗಬೇಕು, ಮುಖ್ಯಮಂತ್ರಿ ಆಗಬೇಕು, ಮಂತ್ರಿ ಆಗಬೇಕು ಎಂಬ ಯಾವುದೇ ಆಸೆ ಇಲ್ಲ. ಆದರೆ ದೇಶವಾಸಿಗಳು ನೆಮ್ಮದಿಯಿಂದ ಇರಬೇಕು ಎನ್ನುವ ನನ್ನ ಆಸೆಗೆ ಪ್ರಧಾನಮಂತ್ರಿ ಆಗಲು ಸಾಮರ್ಥ್ಯ ಇರುವ ವ್ಯಕ್ತಿ ನರೇಂದ್ರ ಮೋದಿ ಬಿಟ್ಟರೆ ಬೇರೆ ಯಾವುದೇ ವ್ಯಕ್ತಿ ಭಾರತದಲ್ಲಿಲ್ಲ. ಆ ಹಿನ್ನೆಲೆಯಲ್ಲಿ ಯಾವುದೇ ಷರತ್ತಿಲ್ಲದೆ ನಾನು ಮೋದಿಯವರನ್ನು ಬೆಂಬಲಿಸಿದೆ ಎಂದರು.
ಕೋಟ ಶ್ರೀನಿವಾಸ ಪೂಜಾರಿಯವರ ಎದುರು ನಿಂತ ಕಾಂಗ್ರೆಸ್ ಅಭ್ಯರ್ಥಿ ನನ್ನ ಸಚಿವ ಸಂಪುಟದಲ್ಲಿ ಮಂತ್ರಿಯಾಗಿದ್ದವರು. ಆದರೆ ಕೋಟ ಶ್ರೀನಿವಾಸ ಪೂಜಾರಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗೆ ಹೋಲಿಸಿದರೆ ಕೋಟರವರ ವ್ಯಕ್ತಿತ್ವ ಬಹಳ ಎತ್ತರದಲ್ಲಿ ನಿಲ್ಲುತ್ತದೆ. ಆ ಹಿನ್ನೆಲೆಯಲ್ಲಿ ಇಂತಹ ರಾಜಕಾರಣಿಗಳು ಸಂಸತ್ ಪ್ರವೇಶ ಮಾಡಬೇಕಾದಂತಹ ಅಗತ್ಯವಿದೆ. ಕೋಟ ಶ್ರೀನಿವಾಸ ಪೂಜಾರಿಯವರನ್ನು ಸಂಸತ್ತಿಗೆ ಕಳುಹಿಸಿ ಎಂಬ ಮೋದಿಯವರ ಮಾತಿಗೆ ನಾನು ಧ್ವನಿಗೂಡಿಸಿ ಕೋಟರವರನ್ನು ಪ್ರಚಂಡ ಬಹುಮತದಿಂದ ಆಯ್ಕೆ ಮಾಡಬೇಕೆoದು ಕೈ ಮುಗಿದು ಪ್ರಾರ್ಥಿಸುತ್ತೇನೆ ಎಂದು ನೆರೆದ ಜನಸ್ತೋಮಕ್ಕೆ ದೇವೇಗೌಡರು ಮನವಿ ಮಾಡಿದರು.
ಬಿಜೆಪಿ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಮಾತನಾಡಿ ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಎನ್‌ಡಿಎ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಬಹುಮತದಿಂದ ಗೆಲ್ಲಿಸುವ ಮೂಲಕ, ಮತ್ತೊಮ್ಮೆ ನರೇಂದ್ರ ಮೋದಿಯವರನ್ನು ಪ್ರಧಾನ ಮಂತ್ರಿಯಾಗಿಸಿ ‘ವಿಕಸಿತ ಭಾರತ’ದ ಕನಸು ನನಸಾಗಿಸಲು ಸಹಕಾರ ನೀಡಬೇಕೆಂದು ವಿನಂತಿಸಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಮತ್ತು ಜೆಡಿಎಸ್ ನ ಜಂಟಿ ಅಭ್ಯರ್ಥಿಯಾದ ನನ್ನನ್ನು ಬೆಂಬಲಿಸಬೇಕು ಎಂದು ಕೋಟ ಶ್ರೀನಿವಾಸ ಪೂಜಾರಿಯವರು ಮತದಾರರಲ್ಲಿ ಮನವಿ ಮಾಡಿದರು.
ಈ ಸಂದರ್ಭದಲ್ಲಿ ಭಾರತೀಯ ಜನತಾ ಪಾರ್ಟಿಯ ನಿಕಟಪೂರ್ವ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ವಿಧಾನ ಪರಿಷತ್ತಿನ ಉಪ ಸಭಾಪತಿ ಎಮ್.ಕೆ. ಪ್ರಾಣೇಶ್, ಸಕಲೇಶಪುರ ಶಾಸಕ ಸಿಮೆಂಟ್ ಮಂಜು, ಮಾಜಿ ಶಾಸಕರಾದ ವೈ ಎಸ್ ವಿ ದತ್ತ, ಬಿಜೆಪಿ ಜಿಲ್ಲಾಧ್ಯಕ್ಷ ದೇವರಾಜ್ ಶೆಟ್ಟಿ, ಜೆಡಿಎಸ್ ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್, ಬಿಜೆಪಿ ಮುಖಂಡರಾದ ದೀಪಕ್ ದೊಡ್ಡಯ್ಯ, ವಿಧಾನ ಪರಿಷತ್ ಸದಸ್ಯ ಬೋಜೆ ಗೌಡ, ಮೂಡಿಗೆರೆ ಮಂಡಲ ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ, ಅಲ್ದೂರು ಮಂಡಲ ಅಧ್ಯಕ್ಷ ರವಿ ಬಸವರಹಳ್ಳಿ, ಸುರೇಶ ಗೌಡ ಸೇರಿದಂತೆ ಉಭಯ ಪಕ್ಷಗಳ ಮುಖಂಡರು, ವಿವಿಧ ಸ್ತರದ ಪದಾಧಿಕಾರಿಗಳು, ಕಾರ್ಯಕರ್ತರು, ಸಾರ್ವಜನಿಕರು ಉಪಸ್ಥಿತರಿದ್ದರು.
ಉಡುಪಿ-ಚಿಕ್ಕಮಗಳೂರು ಕ್ಷೇತ್ರದಾದ್ಯoತ ನಡೆದಿರುವ ಎಲ್ಲಾ ಅಭಿವೃದ್ಧಿ ಕೆಲಸ ಕಾರ್ಯಗಳನ್ನು ನಾನೇ ಮಾಡಿರುವುದು ಎಂದು ಸುಳ್ಳಿನ ಕಂತೆಯನ್ನೇ ಹರಿಯ ಬಿಡುತ್ತಿರುವ ಕಾಂಗ್ರೆಸ್ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಮುoದಿನ ಚುನಾವಣೆಗೆ ಯಾವ ಪಕ್ಷದಲ್ಲಿ ಸ್ಪರ್ಧೆಸುತ್ತಾರೆ ಎಂಬ ಜಿಜ್ಞಾಸೆ ಪ್ರಾಯಶ: ಕಾಂಗ್ರೆಸ್ ಕಾರ್ಯಕರ್ತರ ಸಹಿತ ಎಲ್ಲ ಮತದಾರರಲ್ಲಿ ಜಾಗ್ರತವಾಗಿರುವುದು ವಾಸ್ತವ. ಯಾವುದೇ ದಾಖಲೆಗಳಿಲ್ಲದೆ ಬೇಕಾಬಿಟ್ಟಿ ಹೇಳಿಕೆ ನೀಡುತ್ತಿರುವ ಹೆಗ್ಡೆ ಮಾತನ್ನು ನಂಬುವಷ್ಟು ಜನತೆ ದಡ್ಡರಲ್ಲ. ಈ ನಿಟ್ಟಿನಲ್ಲಿ ವಿಕಸಿತ ಭಾರತವನ್ನು ವಿಶ್ವ ಗುರು ಮಾಡಲು ಹೊರಟಿರುವ ರಾಷ್ಟ್ರ ಭಕ್ತ ನರೇoದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ಬಿಜೆಪಿಯ ಸಮರ್ಥ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಬೆoಬಲಿಸಿ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.
ಅವರು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಅಧ್ಯಕ್ಷತೆಯಲ್ಲಿ ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾವಣಾ ಪ್ರಗತಿ ಪರಿಶೀಲನಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.
ಒಂದು ಕಾಲದಲ್ಲಿ ನಮ್ಮ ಭಾರತ, ದೇಶದ ಚಿನ್ನವನ್ನು ಅಡವಿಟ್ಟು ದೇಶವನ್ನು ನಡೆಸುವ ಸ್ಥಿತಿಯಿಂದ ಪ್ರಸಕ್ತ ಮೋದಿ ಆಡಳಿತಾವಧಿಯಲ್ಲಿ 70ಕ್ಕೂ ಹೆಚ್ಚು ರಾಷ್ಟ್ರಗಳಿಗೆ ಸಾಲ ನೀಡುವ ಮಟ್ಟಕ್ಕೆ ಬೆಳೆದಿದೆ. ಪುಲ್ವಾಮ ದಾಳಿಗೆ 24 ಗಂಟೆಯೊಳಗೆ ಪಾಕಿಸ್ಥಾನದ ಗಡಿ ದಾಟಿ ಸರ್ಜಿಕಲ್ ಸ್ರೈಕ್ ಮೂಲಕ ಪ್ರತ್ಯುತ್ತರ ನೀಡಿದೆ. ಪ್ರಧಾನಿ ಮೋದಿ ಮಧ್ಯಸ್ಥಿಕೆಯಿಂದ ರಷ್ಯಾ-ಉಕ್ರೇನ್ ಯುದ್ಧ ನಿಲ್ಲಿಸಿ ನಮ್ಮ ದೇಶದ ಧ್ವಜದೊಂದಿಗೆ ಭಾರತ ಮತ್ತಿತರ ದೇಶಗಳ ವಿದ್ಯಾರ್ಥಿಗಳು ಸುರಕ್ಷಿತವಾಗಿ ಮರಳಿರುವುದು ದೇಶದ ಕೀರ್ತಿ ಹೆಚ್ಚಿಸಿದೆ. ಭಾರತೀಯರ ಶೃದ್ಧಾ ಕೇಂದ್ರ ರಾಮ ಮಂದಿರ ನಿರ್ಮಾಣ, ಸಂವಿಧಾನದ 370ನೇ ವಿಧಿ ರದ್ದತಿ, ಟ್ರಿಪಲ್ ತಲಾಕ್ ರದ್ಧತಿ ಮುಂತಾದ ಐತಿಹಾಸಿಕ ಸಾಧನೆ ಪ್ರಧಾನಿ ಮೋದಿ ನೇತೃತ್ವದ ಕೇಂದ್ರ ಸರಕಾರದಿಂದ ಸಾಧ್ಯವಾಗಿದೆ ಎಂದರು.
ಕಾಂಗ್ರೆಸ್ ದೇಶದ ಬಹುಸಂಖ್ಯಾತರ ಭಾವನೆಗಳ ಸಹಿತ ರಾಷ್ಟ್ರೀಯ ಏಕತೆ ಮತ್ತು ಅಖಂಡತೆಗೆ ಕವಡೆ ಕಿಮ್ಮತ್ತು ನೀಡದೆ ರಾಷ್ಟ್ರ ಹಿತಕ್ಕೆ ಕೊಡಲಿಯೇಟು ನೀಡುತ್ತಾ ಬಂದಿದೆ. ಭಯೋತ್ಪಾದಕರು, ರಾಷ್ಟ್ರ ವಿರೋಧಿಗಳ ಬಗ್ಗೆ ಮೃದು ಧೋರಣೆ ತಾಳಿರುವ ಕಾಂಗ್ರೆಸ್ ನಿಂದ ದೇಶದ ರಕ್ಷಣೆ ಊಹಿಸಲಸಾಧ್ಯ ಎಂಬಂತಾಗಿದೆ ಎಂದರು.
ದೇಶವನ್ನು ವಿಶ್ವದ ಐದನೇ ಆರ್ಥಿಕ ಶಕ್ತಿಯನ್ನಾಗಿಸಿ ಮುಂದಿನ ಅವಧಿಯಲ್ಲಿ ವಿಶ್ವದ ಮೂರನೇ ಆರ್ಥಿಕ ಶಕ್ತಿಯನ್ನಾಗಿಸುವ ಪಣ ತೊಟ್ಟಿರುವ ಪ್ರಧಾನಿ ಮೋದಿ ಕೈ ಬಲಪಡಿಸಲು ಕೋಟ ಶ್ರೀನಿವಾಸ ಪೂಜಾರಿಯವರನ್ನು ದೊಡ್ಡ ಅಂತರದ ಮತಗಳಿಂದ ಗೆಲ್ಲಿಸಿಕೊಡಬೇಕು ಎಂದು ಗುರ್ಮೆ ಮನವಿ ಮಾಡಿದರು.
*ರಾಷ್ಟೀಯ ಹೆದ್ದಾರಿ ಅವೈಜ್ಞಾನಿಕ ಯೋಜನೆಗೆ ಕಾಂಗ್ರೆಸ್ ಕಾರಣ : ಕೆ.ರಘುಪತಿ ಭಟ್*
ಯುಪಿಎ ಆಡಳಿತಾವಧಿಯಲ್ಲಿ ಉಡುಪಿಯ ಆಸ್ಕರ್ ಫೆರ್ನಾಂಡಿಸ್ ಹೆದ್ದಾರಿ ಸಚಿವರಾಗಿದ್ದ ಸಂದರ್ಭದಲ್ಲಿ ನಡೆದ ರಾ.ಹೆ. 66 ಅವೈಜ್ಞಾನಿಕ ಯೋಜನೆಗೆ ಕಾಂಗ್ರೆಸ್ ನೇರ ಕಾರಣ ಎಂದು ಉಡುಪಿಯ ನಿಕಟಪೂರ್ವ ಶಾಸಕ ಕೆ.ರಘುಪತಿ ಭಟ್ ಆರೋಪಿಸಿದರು.
ಯುಪಿಎ ಅವಧಿಯಲ್ಲಿ ರಾ.ಹೆ. ಯೋಜನೆಯಡಿ ಸಂತೆಕಟ್ಟೆ, ಅಂಬಲಪಾಡಿ, ಕಟಪಾಡಿ, ಪಡುಬಿದ್ರಿಯಲ್ಲಿ ಪ್ರದೇಶದ ಅವೈಜ್ಞಾನಿಕ ಕಾಮಗಾರಿಯ ಬಗ್ಗೆ ಸಂಸದರಾಗಿದ್ದ ಜಯಪ್ರಕಾಶ್ ಹೆಗ್ಡೆ ಅಂದು ದಿವ್ಯ ಮೌನ ವಹಿಸಿದ್ದು, ಸಂಸದೆ ಶೋಭಾ ಕರಂದ್ಲಾಜೆ ಪ್ರಯತ್ನದ ಫಲವಾಗಿ ಇದೀಗ ಈ ಎಲ್ಲಾ ಜಂಕ್ಷನ್ ಗಳ ಸಮಸ್ಯೆ ಪರಿಹರಿಸಲು ಅಂಡರ್ ಪಾಸ್, ಫ್ಲೈ ಓವರ್ ನಿರ್ಮಿಸಲು ಬಿಜೆಪಿ ನೇತೃತ್ವದ ಕೇoದ್ರ ಸರಕಾರ ಕಾರ್ಯಪ್ರವೃತ್ತವಾಗಿದೆ ಎಂದರು.
ಮಾಜಿ ಸಂಸದ ಆಸ್ಕರ್ ಫೆರ್ನಾಂಡಿಸ್ ಮನೆಯಿಂದ ಕೆಲವೇ ಮೀಟರ್ ಪಕ್ಕದಲ್ಲಿರುವ ಅಂಬಲಪಾಡಿ ಜಂಕ್ಷನ್ ನಲ್ಲಿ ಟ್ರಾಫಿಕ್ ಸಮಸ್ಯೆಗೆ ಸಮರ್ಪಕ ಪರಿಹಾರ ಒದಗಿಸಲು ವಿಫಲರಾಗಿರುವ ಹೆಗ್ಡೆಯವರು ತಮ್ಮ ಅವಧಿಯಲ್ಲಿ ನಡೆದ ಪ್ರಮಾಧಗಳನ್ನು ಮುಚ್ಚಿಟ್ಟು ಬಿಜೆಪಿ ಮೇಲೆ ಗೂಬೆ ಕೂರಿಸುವ ವಿಫಲ ಯತ್ನದಲ್ಲಿ ತೊಡಗಿರುವುದು ಹಾಸ್ಯಾಸ್ಪದ ಎಂದರು.
ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ದಾಖಲೆ ಅಭಿವೃದ್ಧಿಯ ಕೆಲಸ ಕಾರ್ಯಗಳನ್ನು ತಾನೇ ಮಾಡಿರುವುದು ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿರುವ ಹೆಗ್ಡೆಯವರು ತಮ್ಮ ಅವಧಿಯಲ್ಲಿ ಹಾಗೂ ತಮ್ಮ ಪಕ್ಷದ ಈ ಹಿಂದಿನ ಸಂಸದರ ಸುದೀರ್ಘ ಅವಧಿಯಲ್ಲಿ ನಡೆದ ಅಭಿವದ್ಧಿ ಕಾರ್ಯಗಳ ವಿವರಗಳನ್ನು ದಾಖಲೆ ಸಮೇತ ಬಹಿರಂಗಪಡಿಸಲಿ ಎಂದು ಭಟ್ ಸವಾಲೆಸೆದಿದ್ದಾರೆ.
ಈ ಸಂದರ್ಭದಲ್ಲಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ, ಶಾಸಕರಾದ ಯಶ್ಪಾಲ್ ಎ. ಸುವರ್ಣ, ಕಿರಣ್ ಕುಮಾರ್ ಕೊಡ್ಗಿ, ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್, ಮಾಜಿ ಜಿಲ್ಲಾಧ್ಯಕ್ಷ ಮಟ್ಟಾರ್ ರತ್ನಾಕರ ಹೆಗ್ಡೆ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಚುನಾವಣಾ ಸಂಚಾಲಕ ಕುತ್ಯಾರು ನವೀನ್ ಶೆಟ್ಟಿ, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ. ಸುವರ್ಣ, ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ದಿನಕರ ಶೆಟ್ಟಿ ಹೆರ್ಗ, ಕೆ.ರಾಘವೇಂದ್ರ ಕಿಣಿ, ರೇಷ್ಮಾ ಉದಯ್ ಶೆಟ್ಟಿ, ಜಿಲ್ಲಾ ಮೋರ್ಚಾಗಳ ಅಧ್ಯಕ್ಷರು, ಮಂಡಲಗಳ ಅಧ್ಯಕ್ಷರು, ಚುನಾವಣಾ ನಿರ್ವಹಣಾ ಸಮಿತಿಯ ಸದಸ್ಯರು, ಪಕ್ಷದ ಪ್ರಮುಖರು ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಗೆಲ್ಲುವ ಮಾತಿರಲಿ, ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಆಯ್ಕೆಯಲ್ಲೇ ಕಾಂಗ್ರೆಸ್ ಎಡವಿದ್ದು, ಸ್ವಯಂ ಪಕ್ಷದಿಂದಲೇ ಉಚ್ಚಾಟನೆಗೊಂಡಿರುವ ಜಯಪ್ರಕಾಶ್ ಹೆಗ್ಡೆಯವರನ್ನು ಹಲವಾರು ಕಾಂಗ್ರೆಸ್ ನಾಯಕರ ವಿರೋಧದ ನಡುವೆಯೂ ದುಂಬಾಲುಬಿದ್ದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿಯನ್ನಾಗಿಸುವ ದುಸ್ಥಿತಿ ಕಾಂಗ್ರೆಸ್ ಪಕ್ಷಕ್ಕೆ ಎದುರಾಗಿರುವುದು ವಿಷಾಧನೀಯ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ತಿಳಿಸಿದರು
ಅವರು ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನಡೆದ ಚುನಾವಣಾ ಅಭಿಯಾನ ಪ್ರಮುಖರ ಪ್ರಗತಿ ಪರಿಶೀಲನ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಸಹಿತ ಯಾವುದೇ ಕಾಂಗ್ರೆಸ್ ಮುಖಂಡರ ಹೆಸರನ್ನು ಉಲ್ಲೇಖಿಸದ ಹೆಗ್ಡೆ ಕಾಂಗ್ರೆಸ್ ಪಕ್ಷದ ಚಿಹ್ನೆಗೆ ಮಾತ್ರ ಸೀಮಿತವಾಗಿದ್ದು ಪಕ್ಷೇತರ ಅಭ್ಯರ್ಥಿಯಂತೆ ಮತ ಯಾಚಿಸುತ್ತಿರುವುದು ಶೋಚನೀಯ.
ಶತಮಾನದ ಇತಿಹಾಸವಿರುವ ಕಾಂಗ್ರೆಸ್ ಪಕ್ಷಕ್ಕೆ ಇದು ಶೋಭೆ ಎಂದೆನಿಸಿದರೆ ಕ್ಷೇತ್ರದ ಜನತೆ ರಾಜ್ಯವನ್ನಾಳುತ್ತಿರುವ ಕಾಂಗ್ರೆಸ್ ಪಕ್ಷದ ಹೀನಾಯ ಸ್ಥಿತಿಯನ್ನು ಅರ್ಥಮಾಡಿಕೊಳ್ಳುವಷ್ಟು ಪ್ರಬುದ್ಧರಿದ್ದಾರೆ ಎಂದು ಅವರು ತಿಳಿಸಿದರು.
ಕೇವಲ ಸ್ವಯಂ ಸ್ವಾರ್ಥ ಸಾಧನೆಗಾಗಿ ಅಧಿಕಾರದ ಲಾಲಸೆಯಿಂದ ಪಕ್ಷದಿಂದ ಪಕ್ಷಕ್ಕೆ ಹಾರುತ್ತಾ ಬಂದಿರುವ ಜಯಪ್ರಕಾಶ್ ಹೆಗ್ಡೆಯವರು ತನ್ನ ಬೆಂಬಲಿಗ ಕಾರ್ಯಕರ್ತರಿಗೆ ದ್ರೋಹ ಬಗೆದಿರುವುದು ವಾಸ್ತವ. ಈ ನಿಟ್ಟಿನಲ್ಲಿ ಉಚ್ಚಾಟನೆಗೊಂಡಿದ್ದ ವ್ಯಕ್ತಿಯ ಪರವಾಗಿಯೇ ಮಗದೊಮ್ಮೆ ಮತಯಾಚನೆ ಮಾಡುವ ಸ್ಥಿತಿ ಕಾಂಗ್ರೆಸ್ ಪಾಲಿಗೆ ಒದಗಿ ಬಂದಿರುವುದು ದುರ್ದೈವ. ಪಕ್ಷದಿಂದ ಉಚ್ಛಾಟನೆಗೊಂಡಾಗ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ರವರ ಬಗ್ಗೆ ಏಕವಚನದಲ್ಲಿ ವಾಗ್ದಾಳಿ ನಡೆಸಿದ್ದ ಹೆಗ್ಡೆಯವರು ಇದೀಗ ಓಟಿಗಾಗಿ ಅವರ ಪುತ್ತಳಿಗೆ ಮಾಲಾರ್ಪಣೆಗೈದಿರುವುದು ವಿಪರ್ಯಾಸ. ಖುದ್ದು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ರವರು ಚುನಾವಣೆ ಪ್ರಕ್ರಿಯೆಗಾಗಿ ಜಿಲ್ಲೆಯಲ್ಲಿ ಒಮ್ಮೆಯೂ ಕಾಣಿಸದೆ ಈ ಕ್ಷೇತ್ರದಲ್ಲಿ ಕಾಂಗ್ರೆಸ್ಸಿಗೆ ಗೆಲುವಿನ ಭರವಸೆಯೇ ಇಲ್ಲ ಎಂಬುದನ್ನು ಸೂಚ್ಯವಾಗಿ ಪ್ರಕಟಿಸಿದಂತಿದೆ ಎಂದು ಅವರು ತಿಳಿಸಿದರು.
ಸಂಸತ್ತಿನಲ್ಲಿ ಅಧಿಕೃತ ವಿರೋಧ ಪಕ್ಷದ ಮಾನ್ಯತೆಯೂ ಇಲ್ಲದೆ ದೇಶದೆಲ್ಲೆಡೆ ಜನತೆಯಿಂದ ತೀರಸ್ಕೃತಗೊಂಡಿರುವ ಕಾಂಗ್ರೆಸ್ ಇದೀಗ ಸುಳ್ಳು ಸುದ್ಧಿಗಳನ್ನು ಉತ್ಪಾದಿಸುವ ಕಾರ್ಖಾನೆಯಂತಿದೆ. ಇದಕ್ಕೆ ಪೂರಕವಾಗಿ ಈ ಹಿಂದೆ ಬಿಜೆಪಿ ಕೇoದ್ರದಲ್ಲಿ ಅಧಿಕಾರಕ್ಕೆ ಬಂದರೆ ಎಲ್ಲರ ಖಾತೆಗೆ 15 ಲಕ್ಷ ರೂ. ಹಾಕುವುದಾಗಿ ಹೇಳಿದೆ ಎಂದು ಲೋಕಸಭಾ ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆ ಸುಳ್ಳು ಹೇಳಿಕೆ ನೀಡಿರುವುದು ತೀರಾ ಹಾಸ್ಯಾಸ್ಪದವಾಗಿದೆ. ಈ ಬಗ್ಗೆ ಅವರು ಸೂಕ್ತ ದಾಖಲೆಯನ್ನು ಜನತೆಯ ಮುoದೆ ಹಾಜರುಪಡಿಸಲಿ ಎಂದು ಕಿಶೋರ್ ಕುಮಾರ್ ಕುಂದಾಪುರ ಸವಾಲು ಹಾಕಿದ್ದಾರೆ.
‘ವಿದೇಶದ ಸ್ವಿಸ್ ಬ್ಯಾಂಕಿನಲ್ಲಿರುವ ಕಾಂಗ್ರೆಸ್ಸಿಗರ ಕಪ್ಪು ಹಣವನ್ನು ಭಾರತಕ್ಕೆ ತಂದರೆ ಪ್ರತಿಯೊಬ್ಬ ಭಾರತೀಯನ ಖಾತೆಗೆ ರೂ.15 ಲಕ್ಷದಂತೆ ಹಂಚುವಷ್ಟು ಹಣವಿರಬಹುದು’ ಎಂದಿರುವ ಪ್ರಧಾನಿ ನರೇಂದ್ರ ಮೋದಿಯವರ ಹೇಳಿಕೆಯನ್ನು ತಿರುಚಿ ಹೆಗ್ಡೆ ಅಪಪ್ರಚಾರ ನಡೆಸುತ್ತಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅವರು ತಿಳಿಸಿದರು.
ಅಪಪ್ರಚಾರವೇ ಕಾಂಗ್ರೆಸ್ ಜೀವಾಳ. ಒಂದು ಸುಳ್ಳನ್ನು ನೂರು ಬಾರಿ ಹೇಳಿ ಸತ್ಯವನ್ನಾಗಿಸಲು ಹರಸಾಹಸ ಪಡುತ್ತಿರುವ ಕಾಂಗ್ರೆಸ್ಸಿನ ಹಳೇ ಚಾಳಿ ಯನ್ನು ಜನತೆ ಚೆನ್ನಾಗಿಯೇ ಅರ್ಥೈಸಿಕೊಂಡಿದ್ದಾರೆ.
ಈ ಹಿನ್ನೆಲೆಯಲ್ಲಿ ಸಾಮಾನ್ಯ ಕುಟುಂಬದಲ್ಲಿ ಜನಿಸಿ ಗ್ರಾಮ ಪಂಚಾಯತ್ ಮಟ್ಟದಿಂದ ವಿವಿಧ ಅನುಭವಗಳೊಂದಿಗೆ ಬೆಳೆದು ಬಂದು ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿರುವ ಸರಳ ಸಜ್ಜನಿಕೆಯ ಅನುಭವಿ ಹಾಗೂ ಚಾಣಾಕ್ಷ ರಾಜಕಾರಿಣಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಅತ್ಯಧಿಕ ಮತಗಳ ಅಂತರದಿಂದ ಗೆಲ್ಲಿಸುವ ಮೂಲಕ ಮಗದೊಮ್ಮೆ ನರೇಂದ್ರ ಮೋದಿಯವರನ್ನು ದೇಶದ ಪ್ರಧಾನಿಯನ್ನಾಗಿಸಲು ಸಂಘಟಿತ ಪ್ರಯತ್ನದ ಮೂಲಕ ಎಲ್ಲರೂ ಬದ್ಧತೆಯಿಂದ ಕೈಜೋಡಿಸಬೇಕು ಎಂದು ಅವರು ಕರೆ ನೀಡಿದರು.
ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ ಕುಮಾರ್ ಶೆಟ್ಟಿ ಮಾತನಾಡಿ ಚುನಾವಣಾ ಅಭಿಯಾನದ ವಿವಿಧ ಆಯಾಮಗಳ ಪ್ರಾಮುಖ್ಯತೆಯನ್ನು ವಿವರಿಸಿದರು.
ಈ ಸಂದರ್ಭದಲ್ಲಿ ಬಿಜೆಪಿ ಜಿಲ್ಲಾ ಉಪಾಧ್ಯಕ್ಷರಾದ ಕಿರಣ್ ಕುಮಾರ್ ಬೈಲೂರು, ಪೆರಣoಕಿಲ ಶ್ರೀಶ ನಾಯಕ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನಕರ ಶೆಟ್ಟಿ ಹೆರ್ಗ, ಪ್ರಮುಖರಾದ ಬೈಕಾಡಿ ಸುಪ್ರಸಾದ್ ಶೆಟ್ಟಿ, ಗುರುಪ್ರಸಾದ್ ಶೆಟ್ಟಿ ಕಟಪಾಡಿ, ನಳಿನಿ ಪ್ರದೀಪ್ ರಾವ್, ದಿಲೇಶ್ ಶೆಟ್ಟಿ, ಶಿವಕುಮಾರ್ ಅಂಬಲಪಾಡಿ, ಶ್ರೀನಿಧಿ ಹೆಗ್ಡೆ ಹಿರೇಬೆಟ್ಟು ಹಾಗೂ ವಿವಿಧ ಸ್ತರದ ಪದಾಧಿಕಾರಿಗಳು ಉಪಸ್ಥಿತರಿದ್ದರು.
ಉಡುಪಿ: ಬಿಜೆಪಿ ಸರಕಾರದ ಅವಧಿಯ ಸಾಧನೆಗಳನ್ನು ತನ್ನದೇ ಸಾಧನೆ ಎಂದು ಬಿಂಬಿಸುತ್ತಾ ಯಾವುದೇ ತತ್ವ ಸಿದ್ದಾಂತವಿಲ್ಲದೆ ಅಧಿಕಾರದ ಲಾಲಸೆಯಿಂದ ಪಕ್ಷದಿಂದ ಪಕ್ಷಕ್ಕೆ ಹಾರುವ ಪಕ್ಷಾಂತರವೇ ಜಯಪ್ರಕಾಶ್ ಹೆಗ್ಡೆಯವರ ಸಾಧನೆಯಾಗಿದೆ ಎಂದು ಕಾಪು ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ತಿಳಿಸಿದ್ದಾರೆ.
ಅವರು ಹಿರಿಯಡ್ಕ ದೇವಾಡಿಗರ ಸಭಾ ಭವನದಲ್ಲಿ ನಡೆದ ಬಿಜೆಪಿ ಹಿರಿಯಡ್ಕ ಮಹಾ ಶಕ್ತಿಕೇಂದ್ರ ವ್ಯಾಪ್ತಿಯ ಚುನಾವಣಾ ಪ್ರಚಾರ ಸಭೆಯನ್ನುದ್ದೇಶಿಸಿ ಮಾತನಾಡಿದರು.
ಬಿಜೆಪಿ ಆಡಳಿತಾವಧಿಯಲ್ಲಿ ನಡೆದ ಮಲ್ಪೆ ಬಂದರು ಮತ್ತು ಹೆಜಮಾಡಿ ಬಂದರು ಅಭಿವೃದ್ಧಿಯನ್ನು ತನ್ನ ಸಾಧನೆ ಎಂದು ಸುಳ್ಳು ಪ್ರಚಾರ ಗಿಟ್ಟಿಸಲು ವಿಫಲ ಯತ್ನ ನಡೆಸಿರುವ ಜಯಪ್ರಕಾಶ್ ಹೆಗ್ಡೆ ನಡೆ ಹಾಸ್ಯಾಸ್ಪದ. ಹಲವಾರು ವರ್ಷಗಳಿಂದ ತಾನು ಪ್ರತಿನಿಧಿಸಿದ್ದ ಕ್ಷೇತ್ರ ವ್ಯಾಪ್ತಿಯ ಹಂಗಾರಕಟ್ಟ ಮತ್ತು ಕೋಡಿ ಕನ್ಯಾನ ಬಂದರು ಅಭಿವೃದ್ಧಿಗೆ ಏನು ಕ್ರಮ ಕೈಗೊಂಡಿದ್ದಾರೆ ಎಂಬುದನ್ನು ಹೆಗ್ಡೆ ಜನತೆಯ ಮುಂದೆ ಬಹಿರಂಗಪಡಿಸಲಿ ಎಂದರು.
ಈ ಹಿಂದೆ ಸಚಿವರಾಗಿದ್ದ ಸಂದರ್ಭದಲ್ಲಿ ಮಲ್ಪೆ ಬಂದರಿನ ಬಳಿ ಮೀನುಗಾರಿಕೆಗಾಗಿ ಮೀಸಲಿಟ್ಟದ್ದ ಜಾಗವನ್ನು ಒಳ ಒಪ್ಪಂದದ ಮೂಲಕ ಟೆಬ್ಮಾ ಶಿಪ್ ಯಾರ್ಡ್ ಕಂಪೆನಿಗೆ ನೀಡಿ ಮೀನುಗಾರರ ಅನ್ನದ ಬಟ್ಟಲಿಗೆ ವಿಷ ಹಾಕಿದ ಅನ್ಯಾಯವನ್ನು ಮೀನುಗಾರರು ಎಂದೂ ಮರೆತಿಲ್ಲ ಎಂದರು.
ಕೋಟ ಗೆಲುವು ಶತಸಿದ್ಧ : ಗುರ್ಮೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮಾತನಾಡಿ ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರಕ್ಕೆ ಸರಳ ಸಜ್ಜನಿಕೆಯ ವ್ಯಕ್ತಿತ್ವದ ಅನುಭವಿ ರಾಜಕಾರಣಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪಕ್ಷ ಅಭ್ಯರ್ಥಿಯನ್ನಾಗಿಸಿರುವುದು ಸಮಸ್ತ ಕಾರ್ಯಕರ್ತರಿಗೆ ಹೆಮ್ಮೆ ಎನಿಸಿದೆ. ಹಿಂದುತ್ವ, ಅಭಿವೃದ್ದಿ ಹಾಗೂ ರಾಷ್ಟ್ರೀಯ ಚಿಂತನೆಯ ಮೇಲೆ ಈ ಬಾರಿಯ ಲೋಕಸಭಾ ಚುನಾವಣೆ ನಡೆಯುತ್ತಿದ್ದು, ಬಂಟ ಸಮಾಜ ಸಹಿತ ಇತರ ಎಲ್ಲಾ ಜಾತಿ, ಸಮುದಾಯಗಳು ಹಿಂದುತ್ವ ಹಾಗೂ ದೇಶದ ವಿಚಾರದಲ್ಲಿ ಒಂದಾಗಿ ನರೇಂದ್ರ ಮೋದಿಯವರನ್ನು ಪ್ರಧಾನಿಯನ್ನಾಗಿಸುವ ಜೊತೆಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ನಿಟ್ಟಿನಲ್ಲಿ ಕೋಟ ಶ್ರೀನಿವಾಸ ಪೂಜಾರಿಯವರನ್ನು ಪ್ರಚಂಡ ಬಹುಮತದಿಂದ ಗೆಲ್ಲಿಸಲು ಪಣತೊಟ್ಟಿದ್ದಾರೆ. ಕೋಟ ಗೆಲುವು ಶತಸಿದ್ಧ. ಜನತೆ ಈ ಹಿಂದೆ ನೀಡಿದ ಸಹಕಾರದಂತೆ ಈ ಬಾರಿಯೂ ಕೋಟ ಶ್ರೀನಿವಾಸ ಪೂಜಾರಿಯವರನ್ನು ಗರಿಷ್ಠ ಮತಗಳ ಅಂತರದಿಂದ ಗೆಲ್ಲಿಸಲು ಕೈಜೋಡಿಸಬೇಕು ಎಂದು ವಿನಂತಿಸಿದರು.
ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಮಾತನಾಡಿ ದೇಶಕ್ಕೆ ಪ್ರಧಾನಿ ಮೋದಿಯವರ ನೇತೃತ್ವ ಹಾಗೂ ಹಿಂದುತ್ವದ ಒಗ್ಗಟ್ಟಿನ ಬಲದ ಔಚಿತ್ಯವನ್ನು ವಿಶ್ಲೇಷಿಸಿ ಮಾತನಾಡಿ, ದೇಶದ ಒಳಿತು, ಭದ್ರತೆ ಹಾಗೂ ಅಭಿವೃದ್ಧಿಗಾಗಿ ನರೇಂದ್ರ ಮೋದಿಯವರನ್ನು ಮಗದೊಮ್ಮೆ ಪ್ರಧಾನಿಯನ್ನಾಗಿಸಲು ನನ್ನನ್ನು ಹೆಚ್ಚಿನ ಬಹುಮತದೊಂದಿಗೆ ಗೆಲ್ಲಿಸಬೇಕು ಎಂದು ವಿನಂತಿಸಿದರು.
ಈ ಸಂದರ್ಭದಲ್ಲಿ ಶಾಸಕ ಯಶ್ಪಾಲ್ ಎ. ಸುವರ್ಣ, ಮಾಜಿ ಶಾಸಕ ಕೆ.ರಘುಪತಿ ಭಟ್, ಚುನಾವಣಾ ಪ್ರಚಾರ ಸಮಿತಿ ಅಧ್ಯಕ್ಷ ಪ್ರಮೋದ್ ಮಧ್ವರಾಜ್, ಬಿಜೆಪಿ ನಿಕಟಪೂರ್ವ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್, ಮಹಿಳಾ ಮೋರ್ಚಾ ರಾಜ್ಯ ಪ್ರಧಾನ ಕಾರ್ಯದರ್ಶಿ ಶಿಲ್ಪಾ ಜಿ.ಸುವರ್ಣ, ಜಿಲ್ಲಾ ವಕ್ತಾರೆ ಗೀತಾಂಜಲಿ ಎಮ್. ಸುವರ್ಣ, ಮಂಡಲ ಪ್ರಭಾರಿಗಳಾದ ನಯನಾ ಗಣೇಶ್, ಶ್ಯಾಮಲಾ ಎಸ್. ಕುಂದರ್, ಕಾಪು ಮಂಡಲಾಧ್ಯಕ್ಷ ಜಿತೇಂದ್ರ ಶೆಟ್ಟಿ, ನಿಕಟಪೂರ್ವ ಮಂಡಲಾಧ್ಯಕ್ಷ ಶ್ರೀಕಾಂತ ನಾಯಕ್, ಮಹಾ ಶಕ್ತಿಕೇಂದ್ರದ ಅಧ್ಯಕ್ಷ ಜಿಯಾನಂದ ಹೆಗ್ಡೆ, ಗ್ರಾಮ ಪಂಚಾಯತ್ ಅಧ್ಯಕ್ಷೆ ಜಯಂತಿ ಶೆಟ್ಟಿ ಹಾಗೂ ಪಕ್ಷದ ಪ್ರಮುಖರು, ವಿವಿಧ ಸ್ತರದ ಪದಾಧಿಕಾರಿಗಳು ಮತ್ತು ಕಾರ್ಯಕರ್ತರು ಉಪಸ್ಥಿತರಿದ್ದರು.